ನವದೆಹಲಿ(ಪಿಟಿಐ): ಹೃದ್ರೋಗ ಮತ್ತು ಮಧುಮೇಹದ ಚಿಕಿತ್ಸೆಗೆ ಬಳಸುವ 108 ಔಷಧಗಳ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದಲ್ಲಿ ಮಧ್ಯ ಪ್ರವೇಶ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸೂಕ್ತ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದು ಕೋರ್ಟ್ ಸೂಚಿಸಿದೆ.
‘ಆದೇಶವನ್ನು ಪರಿಷ್ಕರಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಿ. ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ಮತ್ತೆ ಅರ್ಜಿ ಸಲ್ಲಿಸಿ’ ಎಂದು ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು, ನ್ಯಾಯಮೂರ್ತಿಗಳಾದ ಎಂ.ಬಿ. ಲೋಕೂರ್ ಮತ್ತು ಎ.ಕೆ. ಸಿಕ್ರಿ ಅವರನ್ನೊಳಗೊಂಡ ಪೀಠ ಹೇಳಿದೆ.
ಜೀವರಕ್ಷಕ ಔಷಧಗಳ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಿರುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಈ ನಿರ್ಧಾರ ಲಕ್ಷಾಂತರ ಜನರ ಜೀವವನ್ನು ಅಪಾಯಕ್ಕೆ ಒಡ್ಡುವ ಮೂಲಕ ಔಷಧ ಕಂಪೆನಿಗಳಿಗೆ ಭಾರಿ ಲಾಭ ಮಾಡಿಕೊಳ್ಳಲು ಅವಕಾಶ ಕೊಡುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲ ಎಂ.ಎಲ್.ಶರ್ಮಾ ವಾದಿಸಿದ್ದರು. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಜುಲೈ 10ರಂದು ಹೃದ್ರೋಗ ಮತ್ತು ಮಧುಮೇಹ ಉಪಶಮನಕ್ಕೆ ಬಳಸುವ 108 ಔಷಧಗಳನ್ನು ನಿಯಂತ್ರಣ ಮುಕ್ತಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.