ಜಮ್ಮು: ಕಾಶ್ಮೀರದಿಂದ ಕನ್ಯಾಕುಮಾರಿವರೆಗೂನೆಲೆಸಿರುವ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಹಾಕಲಾಗುವುದು ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾನುವಾರ ಹೇಳಿದರು.
ಇಲ್ಲಿ ನಡೆದ ವಿಜಯ ಸಂಕಲ್ಪ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಲ್ಲಿನ ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದೆ ಹಾಗೇ ಭಯೋತ್ದಾದನೆ ವಿರುದ್ಧ ಹೋರಾಟ ಮಾಡಿದೆ ಎಂದರು.
ಲಡಾಕ್ ಸೇರಿದಂತೆ ಕಣಿವೆ ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಇಲ್ಲಿನ ಸಾಮಾನ್ಯ ಪ್ರಜೆಗೂ ಸರ್ಕಾರದ ಸವಲತ್ತುಗಳನ್ನು ತಲುಪುವಂತೆ ಮಾಡಲಾಗಿದೆ. ವಂಶಪಾರಂಪರ್ಯದ ಕಾಂಗ್ರೆಸ್, ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರಗಳು ತಮ್ಮ ಸ್ವಂತ ಅಭಿವೃದ್ಧಿ ಮಾಡಿಕೊಂಡಿವೆ ಎಂದು ಅಮಿತ್ ಶಾ ಟೀಕಿಸಿದರು.
ಈ ರಾಜ್ಯಕ್ಕಾಗಿ ಜನ ಸಂಘದ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿಬಲಿದಾನವಾಗಿದ್ದಾರೆ ಎಂದು ಒತ್ತಿ ಹೇಳುವ ಮೂಲಕ ಪುಲ್ವಾಮಾ ದಾಳಿಯನ್ನು ಖಂಡಿಸಿದರು. 40 ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ,ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಉಗ್ರರನ್ನು ಮಟ್ಟಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ ಎಂದರು.
ಜಮ್ಮು ಮತ್ತು ಕಾಶ್ಮೀರದ ಉಳಿವಿಗಾಗಿ1953ರಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೊಲೀಸರು ಅವರನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದರು. ಹೃದಯಾಘಾತದಿಂದಾಗಿ ಅವರು ಜೈಲಿನಲ್ಲೇಮೃತಪಟ್ಟರು.
ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಮಸೂದೆ ರೀತಿಯಲ್ಲೇ ಒಂದು ಕಾನೂನು ರೂಪಿಸಿ ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಹೊರ ಹಾಕಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.