ನವದೆಹಲಿ: 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಈವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 118 ಮಂದಿ ನಾಗರಿಕರ ಹತ್ಯೆಯಾಗಿದೆ. 128 ಮಂದಿ ಭದ್ರತಾ ಸಿಬ್ಬಂದಿ ಭಯೋತ್ಪಾದಕ ದಾಳಿಗಳಲ್ಲಿ ಹುತಾತ್ಮರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಬುಧವಾರ ತಿಳಿಸಿದೆ.
ಹತ್ಯೆಯಾದವರಲ್ಲಿ ಐವರು ಕಾಶ್ಮೀರಿ ಪಂಡಿತರು, 16 ಮಂದಿ ಇತರ ಹಿಂದೂಗಳು ಹಾಗೂ ಸಿಖ್ಖರು ಸೇರಿದ್ದಾರೆ ಎಂದು ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.
5,502 ಮಂದಿ ಕಾಶ್ಮೀರಿ ಪಂಡಿತರಿಗೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗಿದೆ. 2019ರ ಆಗಸ್ಟ್ ಬಳಿಕ ಕಾಶ್ಮೀರಿ ಪಂಡಿತರು ವಲಸೆ ತೆರಳಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿಗಳ ಸಂಖ್ಯೆ ಇಳಿಕೆಯಾಗಿದೆ. 2018ರಲ್ಲಿ 417 ದಾಳಿಗಳಾಗಿದ್ದು,2021ರಲ್ಲಿ 229ಕ್ಕೆ ಇಳಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.