ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಹತ್ಯೆಯಾದ ಇಬ್ಬರು ಉಗ್ರರನ್ನು ಮುಜಾಫರ್ ಸೋಫಿ ಮತ್ತು ಲಷ್ಕರ್–ಎ–ತೈಬಾ (ಎಲ್‌ಇಟಿ) ದ ಉಮರ್ ತೇಲಿ ಎಂದು ಗುರುತಿಸಲಾಗಿದೆ. ಇಬ್ಬರೂ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಮತ್ತು ಪುಲ್ವಾಮಾದ ತ್ರಾಲ್‌ಗೆ ಸ್ಥಳಾಂತರಗೊಳ್ಳುವ ಮೊದಲು ಶ್ರೀನಗರದಲ್ಲಿ ಸಕ್ರಿಯರಾಗಿದ್ದರು.
'ತ್ರಾಲ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಪ್ರದೇಶಕ್ಕೆ ಬರುವ ಮುನ್ನ ಇವರಿಬ್ಬರು ಶ್ರೀನಗರದಲ್ಲಿ ಹಲವಾರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಶ್ರೀನಗರದಲ್ಲಿ ಇತ್ತೀಚೆಗೆ ನಡೆದ ಸರಪಂಚ್ (ಸಮೀರ್ ಅಹ್ಮದ್) ಹತ್ಯೆಯೂ ಸೇರಿತ್ತು' ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಅಡಗಿರುವ ಬಗ್ಗೆ ಲಭ್ಯವಾದ ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಈ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಬಳಿಕ ಗುಂಡಿನ ಚಕಮಕಿ ನಡೆದಿದೆ.
ಉಗ್ರರು ಅಡಗಿರುವ ಸ್ಥಳದತ್ತ ಭದ್ರತಾ ಪಡೆಗಳು ತೆರಳುತ್ತಿದ್ದಂತೆ ಉಗ್ರರು ಏಕಾಏಕಿ ಭಾರಿ ಪ್ರಮಾಣದ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿಯಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಎನ್‌ಕೌಂಟರ್ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.