ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿರುವ ಚೆಕ್‌ಪೋಸ್ಟ್ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಈ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಭಾರತೀಯ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ದೋಡಾದಲ್ಲಿ ಭಯೋತ್ಪಾದಕರು ಭದರ್ವಾ-ಪಠಾಣ್‌ಕೋಟ್ ಹೆದ್ದಾರಿಯ ಚಟರ್ಗಲ್ಲಾ ಪ್ರದೇಶದಲ್ಲಿರುವ ಚೆಕ್‌ಪೋಸ್ಟ್ ಮೇಲೆ ದಾಳಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಮರು ದಾಳಿ ನಡೆಸಿದ್ದರು. ಈ ವೇಳೆ ನಮ್ಮ ಸಿಬ್ಬಂದಿ ಗಾಯಗೊಂಡರು ಎಂದರು.
ಇದೇ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಸೋಮವಾರ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ನಮ್ಮ ಚೆಕ್‌ಪೋಸ್ಟ್ ಮೇಲೆ ದಾಳಿ ಮಾಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸದ್ಯ ಇಲ್ಲಿ ಉಗ್ರರ ಶೋಧಕ್ಕಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.