ಕೋಲ್ಕತ್ತ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ 9.10ರ ಸುಮಾರಿಗೆ ಎಗ್ರಾದ ಸಮೀಪ ಮೆರವಣಿಗೆ ಸಾಗುತ್ತಿದ್ದಾಗ ಘಟನೆ ನಡೆದಿದೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಜನರ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಘಟನೆ ಖಂಡಿಸಿ, ಬಿಜೆಪಿ ನಾಯಕಿ ಹಾಗೂ ಮೇದಿನಿಪುರದ ಅಭ್ಯರ್ಥಿ ಅಗ್ನಿಮಿತ್ರ ಪೌಲ್, ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
'ರಾಮ ನವಮಿ ಮೆರವಣಿಗೆ ವೇಳೆ ಹಿಂದೂ ಸಹೋದರರು ಮತ್ತು ಸಹೋದರಿಯರ ಮೇಲೆ ಜಿಹಾದಿಗಳು ದಾಳಿ ನಡೆಸಿದ್ದಾರೆ. ದಾಳಿ ಮಾಡಿದವರನ್ನು ರಕ್ಷಿಸಿ, ದಾಳಿಗೊಳಗಾದವರನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಖಂಡಿಸಿ ಇಡೀ ರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ' ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ, 'ರಾಮ ನವಮಿ ಆಚರಣೆ ವೇಳೆ ಬಿಜೆಪಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ' ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.