ತಿರುವನಂತಪುರ: ಒಡಿಶಾ ಮೂಲದ ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ 75 ವರ್ಷದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸದ್ಯ ತಲೆಮರೆಸಿಕೊಂಡಿರುವ ಆರೋಪಿಯು ಎರ್ನಾಕುಲಂನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಮಂಗಳವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂತ್ರಸ್ತ ಯುವತಿ ಒಡಿಶಾ ಮೂಲದ ಗಜಪತಿ ಜಿಲ್ಲೆಯವರು ಎಂದು ಹೇಳಲಾಗಿದೆ. ಮನೆ ಕೆಲಸ ಮಾಡುತ್ತಿದ್ದ ಆಕೆಯ ಮೇಲೆ ಜ್ಯೂಸ್ ಎರಚಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೆ.ಶಿವಪ್ರಸಾದ್ ಎಂಬುವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಶಿವಪ್ರಸಾದ್ ಅವರು ಕೇರಳದ ರಾಜ್ಯ ಕೃಷಿ ನಿಗಮ, ತೋಟಗಾರಿಕಾ ಉತ್ಪನ್ನಗಳ ಅಭಿವೃದ್ಧಿ ನಿಗಮ, ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ ಮತ್ತು ಪ್ಲಾಂಟೇಶನ್ ಕಾರ್ಪೊರೇಷನ್ ಆಫ್ ಕೇರಳ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅ.15ರಂದು ಎರ್ನಾಕುಲಂನಲ್ಲಿರುವ ತಮ್ಮ ಮನೆಯಲ್ಲಿ ಶಿವಪ್ರಸಾದ್ ಅವರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಅ.17 ರಂದು ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 74ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.