ನವದೆಹಲಿ: ಎರಡು ವರ್ಷಗಳಲ್ಲಿ 8.3 ಲಕ್ಷ ಜನರು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ (ಎಬಿ–ಪಿಎಂಜೆಎವೈ) ಕೋವಿಡ್‌ಗೆ ಚಿಕಿತ್ಸೆ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ಮತ್ತು ರಾಜ್ಯಗಳು ಒದಗಿಸಿರುವ ಅಂಕಿ ಅಂಶಗಳನ್ನು ಆಧರಿಸಿ ಈ ಮಾಹಿತಿ ನೀಡಿರುವುದಾಗಿ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಒಟ್ಟಾರೆ 8.3 ಲಕ್ಷ ಜನರ ಪೈಕಿ 4.7 ಲಕ್ಷ ಜನರು ಆಯುಷ್ಮಾನ್ ಯೋಜನೆಯಡಿ ಗುರುತಿಸಲಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಅವರು ಅಂಕಿ ಅಂಶ ನೀಡಿದ್ದಾರೆ.
ಇದು ದೇಶವ್ಯಾಪಿ ಜಾರಿಯಲ್ಲಿರುವ ಕಾರ್ಯಕ್ರಮ. ಹಾಗಾಗಿ ನಗರ ಮತ್ತು ಗ್ರಾಮೀಣ ಭಾಗದ ಫಲಾನಭವಿಗಳನ್ನು ವಿಂಗಡಿಸುವ ಕಾರ್ಯ ಆಗಿಲ್ಲ ಎಂದು ಸಚಿವರು ಹೇಳಿದ್ದಾರೆ.
ಸಾರ್ವಜನಿಕರ ಆರೋಗ್ಯ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದ್ದರೂ, ಕೋವಿಡ್ ಸಾಂಕ್ರಾಮಿಕ ಪಿಡುಗನ್ನು ಎದುರಿಸಲು ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು ನೀಡಿದೆ. ಎಬಿ–ಪಿಎಂಜೆಎವೈ ಯೋಜನೆಯಡಿ ಕೋವಿಡ್ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.