ADVERTISEMENT

ಇ.ಡಿಯಿಂದ ಕೇಜ್ರಿವಾಲ್ ಮನೆ ಮೇಲೆ ದಾಳಿ ಮಾಡಿ ಬಂಧನ ಸಾಧ್ಯತೆ: ಎಎಪಿ

ಪಿಟಿಐ
Published 4 ಜನವರಿ 2024, 4:56 IST
Last Updated 4 ಜನವರಿ 2024, 4:56 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲು ಇಡಿ ಸಜ್ಜಾಗುತ್ತಿದ್ದು, ಮುಖ್ಯಮಂತ್ರಿ ನಿವಾಸಕ್ಕೆ ತೆರಳುವ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮನೆಯ ಎಲ್ಲಾ ಗೇಟ್‌ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎಎಪಿ ಮೂಲಗಳು ಗುರುವಾರ ಆರೋಪಿಸಿವೆ.

ಆದರೆ, ಕೇಜ್ರಿವಾಲ್ ಮೇಲೆ ದಾಳಿ ಮಾಡಿ ಬಂಧಿಸುವ ಯತ್ನ ನಡೆದಿದೆ ಎಂದು ಪಕ್ಷದ ನಾಯಕರು ಹೇಳಿಕೆ ನೀಡಿದ ನಂತರ ಬುಧವಾರದಿಂದ ಸಿಎಂ ಮನೆಯ ಸುತ್ತ ನೆರೆದಿರುವ ಮಾಧ್ಯಮ ಪ್ರತಿನಿಧಿಗಳನ್ನು ನಿಯಂತ್ರಿಸಲು ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಸಿಎಂ ಮನೆಗೆ ಹೋಗುವ ರಸ್ತೆಗಳನ್ನು ಮುಚ್ಚಲಾಗಿದೆ. ಎಲ್ಲಾ ಪ್ರವೇಶ/ನಿರ್ಗಮನ ಗೇಟ್‌ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಿಎಂ ಮನೆಗೆ ನಿಯೋಜಿಸಲಾದ ಸಿಬ್ಬಂದಿಯನ್ನು ಒಳಗೆ ಪ್ರವೇಶಿಸದಂತೆ ತಡೆಯಲಾಗಿದೆ’ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

‘ಇ.ಡಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಮೇಲೆ ಬೆಳಿಗ್ಗೆ ದಾಳಿ ನಡೆಸಲಿದೆ ಎಂಬ ಸುದ್ದಿ ಬರುತ್ತಿದೆ. ಬಂಧಿಸುವ ಸಾಧ್ಯತೆಯಿದೆ’ ಎಂದು ಬುಧವಾರ ರಾತ್ರಿ ದೆಹಲಿ ಸಚಿವೆ ಮತ್ತು ಎಎಪಿ ನಾಯಕ ಅತಿಶಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಬಕಾರಿ ನೀತಿ ಹಗರಣದಲ್ಲಿ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇ.ಡಿ) ನೀಡಿದ್ದ ಮೂರನೇ ಸಮನ್ಸ್‌ಗೂ ಸೊಪ್ಪು ಹಾಕದ ಕೇಜ್ರಿವಾಲ್, ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ನಡುವೆ, ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿರುವ ಕೇಜ್ರಿವಾಲ್, ನೀವು ಯಾವುದೇ ಪ್ರಶ್ನಾವಳಿ ಕಳುಹಿಸಿದರೂ ಉತ್ತರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ಕೇಜ್ರಿವಾಲ್ ಅವರನ್ನು ತಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಇ.ಡಿ ಮೂಲಕ ಅವರನ್ನು ಬಂಧಿಸಲು ಸಮನ್ಸ್ ಜಾರಿ ಮಾಡಿದೆ ಎಂದು ಎಎಪಿ ದೂರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.