ಕೋಲ್ಕತ್ತ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆ ಎದುರಿಸುವ ನಿಟ್ಟಿನಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹಾಗೂ ಅವರ ಪತ್ನಿ ರುಜಿರಾ ಭಾನುವಾರ ದೆಹಲಿಗೆ ತೆರಳಿದ್ದಾರೆ. ಮಾರ್ಚ್ 21 ಮತ್ತು ಮಾರ್ಚ್ 22ರಂದು ಈ ಇಬ್ಬರು ದೆಹಲಿಯ ಇ.ಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಕಲ್ಲಿದ್ದಲು ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಇಬ್ಬರು ನಾಯಕರು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿದ್ದಾರೆ.
ವಿಚಾರಣೆಗೆ ದೆಹಲಿಯ ಇ.ಡಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ ಸಮನ್ಸ್ ವಿರುದ್ಧ ಅಭಿಷೇಕ್ ಹಾಗೂ ಅವರ ಪತ್ನಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮಾರ್ಚ್ 11ರಂದು ಈ ಇಬ್ಬರ ಕೋರಿಕೆಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿತ್ತು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರು ಇದೇ ಪ್ರಕರಣ ಸಂಬಂಧ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ 8 ತಾಸುಗಳ ದೀರ್ಘ ವಿಚಾರಣೆ ಎದುರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.