ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಎರಡೂ ಕಡೆಯವರು ದೂರು ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಎಬಿವಿಪಿ ಮತ್ತು ಎಡ ಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ವಾಗ್ವಾದ ನಡೆಸಿದೆ. ಬಳಿಕ ಇದು ಹಿಂಸಾಚಾರಕ್ಕೆ ತಿರುಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಘರ್ಷಣೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸುತ್ತಿರುವ ದೃಶ್ಯ ಸೆರೆಯಾಗಿದೆ. ಮತ್ತೊಂದು ವಿಡಿಯೊದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಸೈಕಲ್ ಎಸೆಯುತ್ತಿರುವ ದೃಶ್ಯ ಸೆರೆಯಾಗಿದೆ.
ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳ ಗುಂಪನ್ನು ಚದುರಿಸಲು ಪ್ರಯತ್ನಿಸಿದರೂ ಇದು ಸಾಧ್ಯವಾಗಿಲ್ಲ.
ಎರಡೂ ಗುಂಪುಗಳ ಸದಸ್ಯರು ಪರಸ್ಪರ ಆರೋಪ - ಪ್ರತ್ಯಾರೋಪ ಮಾಡಿಕೊಂಡಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ವಿಶ್ವವಿದ್ಯಾನಿಲಯ ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.