ಚೆನ್ನೈ: ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕಿಯೊಬ್ಬರಿಗೆ (ಹೌಸ್ ಸರ್ಜನ್) ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಆರೋಪಿ ವಿರುದ್ಧ ಕಾನೂನಿನ ಕ್ರಮ ಜರುಗಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಡೀನ್ ಕಚೇರಿ ಎದುರು 150ಕ್ಕೂ ಹೆಚ್ಚು ತರಬೇತಿನಿರತ ಶಸ್ತ್ರಚಿಕಿತ್ಸಕಿಯರು ಪ್ರತಿಭಟನೆ ನಡೆಸಿದ್ದಾರೆ.
ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಿರಿಯ ವೈದ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
‘ಬುಧವಾರ ರಾತ್ರಿ 9.30ರ ಸುಮಾರಿಗೆ ಮಹಿಳಾ ಟ್ರೈನಿಯೊಬ್ಬರು ಸ್ಕೂಟರ್ ತೆಗೆದುಕೊಳ್ಳಲು ಪಾರ್ಕಿಂಗ್ ಸ್ಥಳಕ್ಕೆ ಹೋದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ’ ಎಂದು ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಸಿಎಂಸಿಎಚ್) ಡೀನ್ ಡಾ. ನಿರ್ಮಲಾ ತಿಳಿಸಿದ್ದಾರೆ.
ಶಂಕಿತ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 74 ಮತ್ತು ತಮಿಳುನಾಡು ಮಹಿಳೆಯರ ಕಿರುಕುಳ ನಿಷೇಧ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಚೆಗೆ ಕೋಲ್ಕತ್ತದ ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ತರಬೇತಿನಿರತ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ವೆಸಗಿ, ಕೊಲೆ ಮಾಡಲಾಗಿತ್ತು. ಘಟನೆ ಬಗ್ಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.