ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ದೆಹಲಿಯಲ್ಲಿ ಬುಧವಾರ ತಡರಾತ್ರಿ ಮಾತುಕತೆ ನಡೆದಿದೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ಅಕ್ಟೋಬರ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟದ ಭಾಗವಾಗಿರುವ ಶಿವಸೇನಾದ ಏಕನಾಥ ಶಿಂದೆ ಬಣ, ಬಿಜೆಪಿ ಮತ್ತು ಎನ್‌ಸಿಪಿ ಅಜಿತ್ ಪವಾರ್ ಬಣ ಸೀಟು ಹಂಚಿಕೆಯ ಬಗ್ಗೆ ಈಗಾಗಲೇ ಮಾತುಕತೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಹಾಗೂ ಅಜಿತ್ ಪವಾರ್ ಭೇಟಿಯು ಹೆಚ್ಚಿನ ಮಹತ್ವ ಪಡೆದಿದೆ.
ಜುಲೈ 28ರಂದು ಅಜಿತ್ ಪವಾರ್ ಮಗದೊಮ್ಮೆ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಸಭೆ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎನ್‌ಸಿಪಿ ಅಜಿತ್ ಪವಾರ್ ಬಣ, ಒಂದು ಸ್ಥಾನದಲ್ಲಷ್ಟೇ ಜಯ ಸಾಧಿಸಿತ್ತು.
ಅಜಿತ್ ಪವಾರ್ ಅವರ ಎನ್‌ಸಿಪಿ ಬಣವನ್ನು ಮೈತ್ರಿಕೂಟಕ್ಕೆ ಸೇರ್ಡಡೆಗೊಳಿಸಿದ್ದೇ ಲೋಕಸಭೆ ಚುನಾವಣೆಯಲ್ಲಿ ಕಳಪೆ ಸಾಧನೆಗೆ ಕಾರಣ ಎಂದು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಆರ್‌ಎಸ್‌ಎಸ್‌ನ ಸಾಪ್ತಾಹಿಕ 'ವಿವೇಕ್'ನಲ್ಲೂ ಉಲ್ಲೇಖಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.