ಅಲಿಗಢ: ಮುಸ್ಲಿಂ ವ್ಯಕ್ತಿ ಫರೀದ್ ಹತ್ಯೆ ಕಾರಣಕ್ಕೆ ಉದ್ವಿಗ್ನಗೊಂಡಿರುವ ಉತ್ತರ ಪ್ರದೇಶದ ಅಲಿಗಢದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಪೊಲೀಸರು ಮತ್ತು ಜಿಲ್ಲಾ ಆಡಳಿತವು ಕಟ್ಟೆಚ್ಚರವನ್ನು ಮುಂದುವರಿಸಿದೆ. ಇದೇ ವೇಳೆ ಅಲ್ಲಿಯ ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಮಂಗಳವಾರ ರಾತ್ರಿ ಮಾಮು ಭಾಂಜ ಪ್ರದೇಶದಲ್ಲಿ ಈ ಪ್ರಕರಣ ನಡೆದಿತ್ತು. ಇದು ಕೋಮು ಗಲಭೆಗೆ ಕಿಡಿ ಹೊತ್ತಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
‘ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಗತ್ಯವಿರುವಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದೇವೆ’ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಅಮಿತ್ ಕುಮಾರ್ ತಿಳಿಸಿದ್ದಾರೆ.
ಇದೇ ವೇಳೆ, ಅಲಿಗಢ ಮುಖ್ಯ ಮುಫ್ತಿ ಖಾಲಿದ್ ಹಮೀದ್ ಅವರು ಹಿಂದೂ ಮತ್ತು ಮುಸ್ಲಿಮರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿ ಮಾಡಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂದೂ ಒತ್ತಾಯಿಸಿದ್ದಾರೆ.
ಫರೀದ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಳ್ಳ ಎಂದು ಭಾವಿಸಿ ಆತನನ್ನು ಥಳಿಸಿ ಹತ್ಯೆಗೈಯಲಾಗಿದೆ ಎಂದು ಅವರ ಕುಟುಂಬ ಸದಸ್ಯರು ನೀಡಿದ ದೂರಿನಲ್ಲಿ ಹೇಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ. ಶೇಖರ್ ಪಾಠಕ್ ಅವರು ಬುಧವಾರ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.