ರಾಂಚಿ: ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ವಿಚಾರಣೆಗೆ ಒಳಪಡಿಸುವ ಸಾಧ್ಯೆತೆ ಇರುವ ಹಿನ್ನೆಲೆಯಲ್ಲಿ ಈಗಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ನೇತೃತ್ವದ ಮೈತ್ರಿ ಸರ್ಕಾರದ ಎಲ್ಲ ಶಾಸಕರು ರಾಂಚಿಯಲ್ಲೇ ಇರುವಂತೆ ಸೂಚನೆ ನೀಡಲಾಗಿದೆ.
ಇ.ಡಿಗೆ ಕಳುಹಿಸಿದ ಇ-ಮೇಲ್‌ನಲ್ಲಿ ಜನವರಿ 31ರಂದು ಮಧ್ಯಾಹ್ನ 1 ಗಂಟೆಗೆ ತಮ್ಮ ನಿವಾಸದಲ್ಲಿ ಹೇಳಿಕೆ ನೀಡಲು ಸೊರೇನ್ ಸಮ್ಮತಿ ಸೂಚಿಸಿದ್ದಾರೆ.
ಈಗಿನ ರಾಜಕೀಯ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಆಡಳಿತಾರೂಢ ಮೈತ್ರಿಕೂಟದ ಎಲ್ಲ ಶಾಸಕರು ರಾಂಚಿಯಲ್ಲಿಯೇ ಉಳಿದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ, ವಕ್ತಾರ ವಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ರಾಜಧಾನಿ ಬಿಟ್ಟು ಹೋಗದಂತೆ ಶಾಸಕರಿಗೆ ಸೂಚನೆ ನೀಡಲಾಗಿದ್ದು, ಇಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆದರೆ ಸಿಎಂ ರಾಂಚಿಗೆ ಮರಳಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ.
ಕಾಂಗ್ರೆಸ್ ಹಾಗೂ ಆರ್‌ಜೆಡಿ ಪಕ್ಷಗಳು ಜೆಎಂಎಂ ನೇತೃತ್ವದ ಮೈತ್ರಿಕೂಟದ ಭಾಗವಾಗಿದೆ.
ಜಮೀನು ಅಕ್ರಮದ ಹಗರಣವೊಂದಕ್ಕೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲು ಇ.ಡಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಸೋಮವಾರ ಭೇಟಿ ನೀಡಿತ್ತು. ತಂಡವು ಅಲ್ಲಿ 13 ತಾಸುಗಳವರೆಗೆ ಇತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.