ನವದೆಹಲಿ: ಹರಿಯಾಣದ ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೇಸರ ವ್ಯಕ್ತಪಡಿಸಿದ್ದಾರೆ.
ಘಟನೆ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ವಿವರ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
‘ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿರುವುದು ದುರದೃಷ್ಟಕರ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಜತೆ ಮಾತುಕತೆ ನಡೆಸಿದ್ದೇನೆ. ಸ್ಥಳೀಯಾಡಳಿತ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಸಾಧ್ಯವಾದಷ್ಟೂ ಜನರನ್ನು ರಕ್ಷಿಸುವುದೇ ನಮ್ಮ ಆದ್ಯತೆ. ಗಾಯಾಳುಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಹಿಂದಿಯಲ್ಲಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಭೂಕುಸಿತದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.