ಅಮರಾವತಿ: ಆಂಧ್ರಪ್ರದೇಶದಲ್ಲಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಈ ಬಾರಿ ಪುಟಿದೆದ್ದಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯುವ ಜತೆಗೆ ಲೋಕಸಭಾ ಚುನಾವಣೆಯಲ್ಲೂ ಗಮನಸೆಳೆದಿದೆ.
2019ರ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಚಂದ್ರಬಾಬು ನಾಯ್ಡು ಕೇವಲ 3 ಲೋಕಸಭೆ ಕ್ಷೇತ್ರ ಗೆದ್ದಿದ್ದರು. ಜಗನ್‌ಮೋಹನ್ ರೆಡ್ಡಿಯ ವೈಎಸ್‌ಆರ್‌ಸಿಪಿ 23 ಸ್ಥಾನ ಗೆದ್ದಿತ್ತು. ಈ ಬಾರಿ ನಾಯ್ಡು ಅವರು ಜಗನ್ ಪಕ್ಷವನ್ನು ಬಗ್ಗುಬಡಿದಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ಟಿಡಿಪಿ ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಈ ಪೈಕಿ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಟಿಡಿಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ರಾಜ್ಯದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಆ ಪೈಕಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅದೇ ರೀತಿ ರಾಜ್ಯದಲ್ಲಿ ಎನ್‌ಡಿಎಯ ಮತ್ತೊಂದು ಮಿತ್ರಪಕ್ಷವಾಗಿದ್ದ ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಖಾತೆ ತೆರೆದಿದೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜನಸೇನಾ ಒಂದರಲ್ಲಿ ಗೆಲುವು ಸಾಧಿಸಿದೆ.
ಆಂಧ್ರಪ್ರದೇಶವನ್ನು ವಿಭಜಿಸಿದ್ದ ಕಾರಣಕ್ಕೆ ಕಾಂಗ್ರೆಸ್ ಮೇಲಿನ ಜನರ ಸಿಟ್ಟು ಈ ಚುನಾವಣೆಯಲ್ಲೂ ಪ್ರತಿಫಲನಗೊಂಡಿದೆ. ವೈ.ಎಸ್.ಜಗನ್‌ಮೋಹನ್ ರೆಡ್ಡಿ ಅವರ ಸಹೋದರಿ, ಆಂಧ್ರಪ್ರದೇಶದ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಸೇರಿದಂತೆ ಪಕ್ಷದ ಎಲ್ಲ ಅಭ್ಯರ್ಥಿಗಳೂ ಸೋಲು ಕಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.