ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಇದೊಂದು ಭೀಕರ ಕೃತ್ಯವಾಗಿದೆ. ಸಂತ್ರಸ್ತರ ಪರವಾಗಿ ರಾಷ್ಟ್ರ ಇರಲಿದೆ’ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ‘ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ನಡೆದ ಭಯೋತ್ಪಾದಕರ ದಾಳಿಯಿಂದ ನಾನು ದುಃಖಿತನಾಗಿದ್ದೇನೆ. ಈ ಕ್ರೂರ ಕೃತ್ಯವು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ, ಇದನ್ನು ಖಂಡಿಸಬೇಕು. ಸಂತ್ರಸ್ತರ ಕುಟುಂಬಗಳೊಂದಿಗೆ ರಾಷ್ಟ್ರ ನಿಂತಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪೋನಿ ಪ್ರದೇಶದ ತೇರ್ಯತ್ ಗ್ರಾಮದಲ್ಲಿ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದರ ಮೇಲೆ ಭಾನುವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದು, 33 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.