ಅಹಮದಾಬಾದ್: ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದ್ದು, ಪಕ್ಷದ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿದೆ.
ಕಾಂಗ್ರೆಸ್ ಹಿರಿಯ ನಾಯಕ ಸಿ.ಜೆ. ಚಾವ್ಡಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೆಹಸಾನಾ ಜಿಲ್ಲೆಯ ವಿಜಾಪುರ ಕ್ಷೇತ್ರದ ಶಾಸಕ ಚಾವ್ಡಾ ಅವರು ಶುಕ್ರವಾರ ಸ್ಪೀಕರ್ ಶಂಕರ್ ಚೌಧರಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ 15ಕ್ಕೆ ಕುಸಿದಿದೆ.
ಚಾವ್ಡಾ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಾವ್ಡಾ, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ‘ಆಧ್ಯಾತ್ಮಿಕತೆ’ಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕುರಿತು ಕಾಂಗ್ರೆಸ್ ನಾಯಕರು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸುವ ಬದಲು ಅಸಹ್ಯಕರ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ’ ಎಂದು ಟೀಕಿಸಿದ್ದಾರೆ.
2023ರ ಡಿಸೆಂಬರ್ 19ರಂದು ಆನಂದ್ ಜಿಲ್ಲೆಯ ಖಂಭತ್ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಚಿರಾಗ್ ಪಟೇಲ್ ಅವರು ರಾಜೀನಾಮೆ ಸಲ್ಲಿಸಿದ್ದರು.
2022ರ ಡಿಸೆಂಬರ್‌ನಲ್ಲಿ ನಡೆಸಿದ್ದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿತ್ತು. ಇತ್ತ ಕಾಂಗ್ರೆಸ್ ಕೇವಲ 17 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಎಎಪಿ 5 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.