ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಕೇಜ್ರಿವಾಲ್ ಅವರು, ಸ್ವಾತಂತ್ರ್ಯ ನಂತರದಲ್ಲಿ ಬಂಧನಕ್ಕೆ ಒಳಗಾದ ಮೊದಲ ಹಾಲಿ ಮುಖ್ಯಮಂತ್ರಿ ಎನಿಸಿದ್ದಾರೆ.
ಈ ಪ್ರಕರಣದಲ್ಲಿ, ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಬೇಕು ಎಂದು ಕೋರಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಈ ಹಂತದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಗುರುವಾರ ನಿರಾಕರಿಸಿತು.
‘ಹೈಕೋರ್ಟ್ ಆದೇಶ ಹೊರಬಿದ್ದ ಬೆನ್ನಲ್ಲೇ, ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ ಇ.ಡಿ ತಂಡ, ಶೋಧ ನಡೆಸಿತು. ನಂತರ ಕೇಜ್ರಿವಾಲ್ ಅವರನ್ನು ಬಂಧಿಸಿತು’ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ಕೇಜ್ರಿವಾಲ್ ಅವರನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆ ನಡೆಸುವುದಕ್ಕಾಗಿ ಅವರನ್ನು ತನ್ನ ವಶಕ್ಕೆ ನೀಡುವಂತೆ ನ್ಯಾಯಾಲಯವನ್ನು ಕೋರಲಾಗುವುದು’ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರಿಗೆ ಎಂಟು ಬಾರಿ ಸಮನ್ಸ್ ಜಾರಿಗೊಳಿಸಿತ್ತು.
ತೀಕ್ಷ್ಣ ಪ್ರತಿಕ್ರಿಯೆ: ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಆರಂಭಿಸಿರುವ ಈ ಹೊತ್ತಿನಲ್ಲಿ, ಪಕ್ಷದ ಸಂಚಾಲಕರೂ ಆಗಿರುವ ಕೇಜ್ರಿವಾಲ್ ವಿರುದ್ಧ ಇ.ಡಿ ಕೈಗೊಂಡಿರುವ ಕ್ರಮಕ್ಕೆ ಆಮ್ ಆದ್ಮಿ ಪಕ್ಷವು (ಎಎಪಿ) ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ದಿನದ ಬೆಳವಣಿಗೆಗಳು
ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದರಿಂದ ರಕ್ಷಣೆ ನೀಡುವಂತೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್‌ಕುಮಾರ್ ಕೈತ್ ನೇತೃತ್ವದ ಪೀಠ
ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್‌ನಿಂದ ಆದೇಶ. ವಿಚಾರಣೆ ಏ.22ಕ್ಕೆ ಮುಂದೂಡಿಕೆ
ಹೈಕೋರ್ಟ್ ಆದೇಶದ ಬೆನ್ನಲ್ಲೇ 6 ಅಧಿಕಾರಿಗಳ ಇ.ಡಿ ತಂಡ ಕೇಜ್ರಿವಾಲ್ ನಿವಾಸಕ್ಕೆ ಭೇಟಿ, ಶೋಧ
ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಅವರಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ, ಶುಕ್ರವಾರ ಅರ್ಜಿ ವಿಚಾರಣೆ ಸಾಧ್ಯತೆತ
ಅರವಿಂದ ಕೇಜ್ರಿವಾಲ್ ನಿವಾಸದ ಬಳಿ ಎಎಪಿ ಕಾರ್ಯಕರ್ತರು, ಬೆಂಬಲಿಗರಿಂದ ಪ್ರತಿಭಟನೆ
ಮುಂಜಾಗ್ರತಾ ಕ್ರಮವಾಗಿ ಕೇಜ್ರಿವಾಲ್ ನಿವಾಸದ ಬಳಿ ಬಿಗಿ ಬಂದೋಬಸ್ತ್. ದೆಹಲಿ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ಸಿಬ್ಬಂದಿ ನಿಯೋಜನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.