ಗುವಾಹಟಿ (ಅಸ್ಸಾಂ): ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆಸೆಪ್ಟೆಂಬರ್ 29ರಂದು ಅಸ್ಸಾಂನ ಕಾಮರೂಪ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮನೀಶ್ ಸಿಸೋಡಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮನೀಶ್ ಸಿಸೋಡಿಯಾ, ಅಸ್ಸಾಂ ಸರ್ಕಾರವು ಕೋವಿಡ್ ಸಮಯದಲ್ಲಿ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ಪಿಪಿಇ ಕಿಟ್‌ಗಳನ್ನು ಪೂರೈಸಲು ಶರ್ಮಾ ಅವರ ಪತ್ನಿ ಮತ್ತು ಮಗನ ಪಾಲುದಾರಿಕೆ ಇರುವ ಕಂಪನಿಗೆ ಗುತ್ತಿಗೆ ನೀಡಿದೆ ಎಂದು ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಸಿಸೋಡಿಯಾ ವಿರುದ್ಧ ಶರ್ಮಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶರ್ಮಾ ಆ.5ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಕಳೆದೊಂದು ವಾರದಿಂದ ದೆಹಲಿ ಸರ್ಕಾರದ ‘ಅಬಕಾರಿ ನೀತಿ’ ಜಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಹಾಗೂ ಎಎಪಿ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಸಿಸೋಡಿಯಾ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಿದ್ದರೂ ಕೇಜ್ರಿವಾಲ್ ಅವರೇ ಪ್ರಕರಣದ ಸೂತ್ರಧಾರ ಎಂದು ಬಿಜೆಪಿ ಆರೋಪಿಸಿದೆ. ಕೇಜ್ರಿವಾಲ್ ಬಗ್ಗೆ ಇರುವ ಭೀತಿಯಿಂದಾಗಿ ಬಿಜೆಪಿಯು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಸುವ ಯತ್ನ ಮಾಡುತ್ತಿದೆ ಎಂದು ಎಎಪಿ ತಿರುಗೇಟು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.