ನವದೆಹಲಿ: ಎರಡು ರಾಜ್ಯಗಳು ಹಾಗೂ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯ ಸಭೆ ಇದೇ 20 ಹಾಗೂ 21ರಂದು ನವದೆಹಲಿಯಲ್ಲಿ ನಡೆಯಲಿದೆ. ಮಿತ್ರ ಪಕ್ಷಗಳ ಜತೆಗೆ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪಕ್ಷವು ಚುನಾವಣಾ ಸಮಿತಿ ಸಭೆ ಕರೆದಿರುವುದು ಕುತೂಹಲ ಕೆರಳಿಸಿದೆ.
ಮಹಾರಾಷ್ಟ್ರದಲ್ಲಿ ನ. 20ರಂದು ಒಂದೇ ಹಂತದಲ್ಲಿ ಮತ್ತು ಜಾರ್ಖಂಡ್‌ನಲ್ಲಿ ನ. 13 ಮತ್ತು 20ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದಲ್ಲದೆ, ನ. 13ರಂದು ಕರ್ನಾಟಕದ ಮೂರು ಕ್ಷೇತ್ರಗಳು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆ ಕುರಿತಂತೆ ಸಭೆಯಲ್ಲಿ ಮೊದಲ ಹಂತದ ಸಮಾಲೋಚನೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತಿತರ ನಾಯಕರು ಭಾಗಿಯಾಗಲಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಹಾಗೂ ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಜಾರ್ಖಂಡ್‌ನಲ್ಲಿ ಜೆಎಂಎಂ–ಕಾಂಗ್ರೆಸ್ 70 ಕ್ಷೇತ್ರಗಳಲ್ಲಿ, ಆರ್‌ಜೆಡಿ ಹಾಗೂ ಎಡಪಕ್ಷಗಳು 11 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಶನಿವಾರ ತಿಳಿಸಿದ್ದಾರೆ. ಕಾಂಗ್ರೆಸ್‌ಗೆ ಎಷ್ಟು ಸ್ಥಾನಗಳನ್ನು ಬಿಟ್ಟುಕೊಡಲಾಗುತ್ತದೆ ಎಂಬುದನ್ನು ಅವರು ತಿಳಿಸಿಲ್ಲ. ಮೈತ್ರಿಯಲ್ಲಿ ಚೌಕಾಸಿ ಮುಂದುವರಿದಿದೆ.
ಕರ್ನಾಟಕ, ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಕ್ಕೆ ಮುನ್ನವೇ ಪಕ್ಷವು ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿತ್ತು ಹಾಗೂ ಪ್ರಚಾರಕ್ಕೆ ಚಾಲನೆ ನೀಡಿತ್ತು. ಈ ರಾಜ್ಯಗಳಲ್ಲಿ ಪಕ್ಷ ಗೆದ್ದಿತ್ತು. ಆದರೆ, ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನಲ್ಲಿ ಸೀಟು ಹಂಚಿಕೆ ಅಂತಿಮಗೊಳ್ಳದಿರುವುದರಿಂದ ಪ್ರಚಾರಕ್ಕೆ ಹಿನ್ನಡೆಯಾಗಿದೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಜಾರ್ಖಂಡ್‌ನಲ್ಲಿ ಬಿಜೆಪಿಯು ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಅಂತಿಮಗೊಳಿಸಿದೆ ಹಾಗೂ ಹಿಂದುತ್ವವನ್ನು ಪ್ರಮುಖ ವಿಷಯವನ್ನಾಗಿಟ್ಟುಕೊಂಡು ಆಕ್ರಮಣಕಾರಿ ಪ್ರಚಾರ ನಡೆಸುತ್ತಿದೆ. ಆಡಳಿತ ವಿರೋಧಿ ಅಲೆ ಬಲವಾಗಿದೆ. ಇದರಿಂದಾಗಿ, ಇದರಿಂದ ಜೆಎಂಎಂ ಮೈತ್ರಿಕೂಟಕ್ಕೆ ಕಣ ಕಠಿಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಜೈಲಿಗೆ ಹೋಗಿ ಬಂದಿದ್ದಾರೆ. ಈ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರಚಾರ ನಡೆಸುತ್ತಿದೆ. ಜತೆಗೆ, ಬುಡಕಟ್ಟು ಸಮುದಾಯಗಳ ಮತ ವಿಭಜನೆಯಾಗುವ ಸಂಭವ ಇದೆ. ಇದಲ್ಲದೆ, ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿರುವುದು ಸಹ ಹೊಡೆತ ನೀಡಬಹುದು ಎಂದು ಕಾಂಗ್ರೆಸ್ ನಾಯಕರೊಬ್ಬರು ವಿಶ್ಲೇಷಿಸಿದರು.
ಮಹಾರಾಷ್ಟ್ರದಲ್ಲಿ, ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಭಾಗವಹಿಸಿದರೆ ಭವಿಷ್ಯದ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಶಿವಸೇನೆ (ಯುಬಿಟಿ) ಶುಕ್ರವಾರ ಬೆದರಿಕೆ ಹಾಕಿದೆ. ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಪಕ್ಷದ ಉಸ್ತುವಾರಿ ರಮೇಶ್ ಚೆನ್ನಿತ್ತಲ ಮುಂಬೈಗೆ ಧಾವಿಸಿದರು.
ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) 288 ಸ್ಥಾನಗಳ ಪೈಕಿ ಸುಮಾರು 260 ಸ್ಥಾನಗಳಲ್ಲಿ ಒಮ್ಮತಕ್ಕೆ ಬಂದಿವೆ. ಉಳಿದ ಕ್ಷೇತ್ರಗಳ ಕಗ್ಗಂಟು ಬಗೆಹರಿದಿಲ್ಲ. ಅಲ್ಲದೆ, ಮೈತ್ರಿಕೂಟದಲ್ಲಿ ಸಮಾಜವಾದಿ ಪಕ್ಷ, ಸಿಪಿಐ(ಎಂ), ರೈತರು ಮತ್ತು ಕಾರ್ಮಿಕರ ಪಕ್ಷಗಳಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸಬೇಕಾಗುತ್ತದೆ.
ಕಾಂಗ್ರೆಸ್ ಪಕ್ಷವು 115–120 ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿದೆ. ಆದರೆ, ಮಿತ್ರಪಕ್ಷಗಳು 100ರಿಂದ 105 ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಲು ಒಲವು ತೋರಿವೆ. ಹರಿಯಾಣ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಿತ್ರ ಪಕ್ಷಗಳು ಕಾಂಗ್ರೆಸ್ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದವು. ಹಿರಿಯಣ್ಣನಂತೆ ವರ್ತಿಸುವುದನ್ನು ಬಿಡಬೇಕು ಎಂದು ಕಟುವಾಗಿ ಹೇಳಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.