ಬೆಂಗಳೂರು: ಮಾಜಿ ಪ್ರಧಾನಮಂತ್ರಿ, ಶ್ರೇಷ್ಠ ವಾಗ್ಮಿ, ಕವಿ, ಬಿಜೆಪಿ ನಾಯಕ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮ ದಿನೋತ್ಸವದ ಅಂಗವಾಗಿ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ ಸೇರಿದಂತೆ ಹಲವರು ಗಣ್ಯರು‘ಸದೈವ್ ಅಟಲ್’ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಕುರಿತಾದ ವಿಡಿಯೊವನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಟಲ್ ಜೀ ಅವರ ಜಯಂತಿಯಂದು ದೇಶದ ಎಲ್ಲ ಕುಟುಂಬ ಸದಸ್ಯರ ಪರವಾಗಿ ಅವರಿಗೆ ನಮಿಸುತ್ತೇನೆ. ಅವರು ತಮ್ಮ ಜೀವನದುದ್ದಕ್ಕೂ ರಾಷ್ಟ್ರ ನಿರ್ಮಾಣದಲ್ಲಿ ನಿರತರಾಗಿದ್ದರು. ಭಾರತ ಮಾತೆಗೆ ಅವರ ಸಮರ್ಪಣಾ ಸೇವೆ ನಮಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಪ್ರಧಾನಿ ಮತ್ತು ನನ್ನ ಹಿರಿಯ ಸ್ನೇಹಿತ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಜೆಡಿಎಸ್ ಹಿರಿಯ ನಾಯಕ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಟ್ವೀಟ್ ಮಾಡಿದ್ದಾರೆ.
ಸಂಸದೀಯ ಪಟು, ಕವಿ, ಶ್ರೇಷ್ಠ ಮಾರ್ಗದರ್ಶಕ, ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಪೂರ್ವಕ ನಮನಗಳು. ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನ ಎಂದು ಆಚರಿಸಲಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಅಶೋಕ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.