ನವದೆಹಲಿ:ಅಯೋಧ್ಯೆ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಮುಸ್ಲಿಂ ಸಘಟನೆ ಜಮೀಯತ್ ಉಲೇಮಾ ಇ ಹಿಂದ್ ತಿಳಿಸಿದೆ.
ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ. ವಕೀಲರು ಮತ್ತು ತಜ್ಞರ ಬಳಿ ಚರ್ಚಿಸಿ ಈ ತೀರ್ಮಾನ ಕೈಗೊಂಡಿದ್ದೇವೆ ಎಂದುಸಂಘಟನೆಯ ಮುಖ್ಯಸ್ಥ ಮೌಲಾನಾ ಅರ್ಷದ್ಮದನಿ ತಿಳಿಸಿದ್ದಾರೆ.
ಇದಕ್ಕೂ ಕೆಲವೇ ಗಂಟೆಗಳ ಮುನ್ನ, ಅಯೋಧ್ಯೆ ತೀರ್ಪಿಗೆ ಸಂಬಂಧಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಾಗಿಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿತ್ತು.
ಸುಪ್ರೀಂ ಕೋರ್ಟ್ ತೀರ್ಪು ಮುಸ್ಲಿಮರಿಗೆ ವಿರುದ್ಧವಾಗಿದೆ. ಅಲ್ಲದೆ ಇದುವೇ ಕೊನೆಯ ತೀರ್ಪಲ್ಲ. ಈ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಭಾರತೀಯ ಸಂವಿಧಾನದ ಪ್ರಕಾರ ಅವಕಾಶವಿದೆ ಎಂದು ತಜ್ಞರ ಸಮಿತಿ ಹೇಳಿತ್ತು ಎನ್ನಲಾಗಿದೆ.
ಶತಮಾನದಷ್ಟು ಹಿಂದಿನ ಅಯೋಧ್ಯೆರಾಮಜನ್ಮಭೂಮಿ–ಬಾಬರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿತ್ತು.ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಭೂಮಿ ನೀಡುವಂತೆಯೂ ಸರ್ಕಾರಕ್ಕೆ ಆದೇಶ ನೀಡಿತ್ತು.
ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಿಲ್ಲ ಎಂದು ಪ್ರಕರಣದ ಕಕ್ಷಿದಾರ ಸುನ್ನಿ ವಕ್ಫ್ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ.
ಆದರೆ,ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿ ಹಲವು ಅರ್ಜಿದಾರರು ಮರುಪರಿಶೀಲನಾ ಅರ್ಜಿ ಸಲ್ಲಿಸಲು ಒಲವು ತೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.