ಬಾರಾಬಂಕಿ (ಪಿಟಿಐ): ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬಾಬುರಿ ಗ್ರಾಮದಲ್ಲಿ ಬಸ್ ಮತ್ತುಮರಳು ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 15 ಮಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
70 ಪ್ರಯಾಣಿಕರಿದ್ದ ಬಸ್ ದೆಹಲಿಯಿಂದ ಬಹ್ರೈಚ್‌ಗೆ ಹೋಗುತ್ತಿತ್ತು. ಬಸ್ ಚಾಲಕ, ಅಡ್ಡಬಂದ ಬಿಡಾಡಿ ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅಪಘಾತ ಸಂಭವಿಸಿದೆ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ತಿಳಿಸಿದ್ದಾರೆ.
ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಖೌನದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಆಸ್ಪತ್ರೆಯಲ್ಲಿ 11 ಮಂದಿ ಮತ್ತು ನಾಲ್ವರು ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
2 ಲಕ್ಷ ಪರಿಹಾರ ಘೋಷಣೆ:ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ₹ 2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.