ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಒಳನುಸುಳಲು ಯತ್ನಿಸಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಶನಿವಾರ ಹತ್ಯೆ ಮಾಡಿವೆ.
ಗುಪ್ತಚರ ಸಂಸ್ಥೆಗಳ ಮಾಹಿತಿಯ ಅನ್ವಯ ಉತ್ತರ ಕಾಶ್ಮೀರ ಜಿಲ್ಲೆಯ ಉರಿ ವಲಯದ ಹತ್ಲಂಗ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉಗ್ರರ ಒಳನುಸುಳುವ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಸೇನೆಯ ಚಿನಾರ್ ಕೋರ್ ‘ಎಕ್ಸ್’ (ಟ್ವಿಟರ್) ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಇಬ್ಬರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನದ ಕಡೆಯಿಂದ ಗುಂಡಿನ ದಾಳಿ ನಡೆಯುತ್ತಿರುವುದರಿಂದ ಮೂರನೇ ಉಗ್ರನ ಮೃತದೇಹವನ್ನು ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ ಎಂದೂ ಹೇಳಿದೆ.
ಮೃತ ಉಗ್ರರು ಯಾವ ಸಂಘಟನೆಗೆ ಸೇರಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅವಿತುಕೊಂಡಿರುವ ಉಗ್ರರನ್ನು ಸದೆಬಡಿಯಲು ನಾಲ್ಕನೇ ದಿನವಾದ ಶನಿವಾರವೂ ಕಾರ್ಯಾಚರಣೆ ಮುಂದುವರಿದಿದ್ದು, ಈ ನಡುವೆ ಉರಿ ವಲಯದಲ್ಲಿ ಭಯೋತ್ಪಾದಕರು ದೇಶದೊಳಕ್ಕೆ ನುಸುಳಲು ಯತ್ನಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.