ಲಖನೌ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಜಿಲ್ಲೆಯ ಸಿರೌಲಿ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ವರದಿಯಾಗಿತ್ತು. ಆದರೆ ತಡರಾತ್ರಿ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ 3 ಮತ್ತು 4 ವರ್ಷದ ಇಬ್ಬರು ಮಕ್ಕಳ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ನೆರೆಹೊರೆಯ ಮನೆಗಳಿಗೂ ಹಾನಿಯಾಗಿದೆ. ಈ ಘಟನೆ ಸಂಬಂಧ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.