ಕೋಲ್ಕತ್ತ: ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಣಕಾಸು ಚಟುವಟಿಕೆಗಳ ತನಿಖೆ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ಆದೇಶಿಸಿದೆ.
ಇದೇ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣ ನಡೆದಿದೆ.
ಸ್ವಾಮಿ ವಿವೇಕಾನಂದ ರಾಜ್ಯ ಪೊಲೀಸ್ ಅಕಾಡೆಮಿಯ ಐಜಿ ಪ್ರಣವ್ ಕುಮಾರ್ ನೇತೃತ್ವದ ಎಸ್‌ಐಟಿಯನ್ನು ರಚಿಸಲಾಗಿದೆ. ತನಿಖೆ ನಡೆಸಿ ವರದಿ ನೀಡಲು ಎಸ್‌ಐಟಿಗೆ ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ.
ಇನ್ನು ಇದೇ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ ತನಿಖೆ ನಡೆಸುತ್ತಿದೆ. ಈ ಆಸ್ಪತ್ರೆಯ ಹಣಕಾಸು ಚಟುವಟಿಕೆಗಳು ಅನುಮಾನಾಸ್ಪದವಾಗಿವೆ ಎಂಬ ಆರೋಪಗಳೂ ಕೇಳಿ ಬಂದಿವೆ.
ಆಗಸ್ಟ್ 9 ರಂದು ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಈ ಘಟನೆ ಕುರಿತಂತೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಇನ್ನೊಂದೆಡೆ ಈ ಘಟನೆ ಖಂಡಿಸಿ ಕೋಲ್ಕತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು, ಕಿರಿಯ ವೈದ್ಯರು ಇಂದು ಕೂಡ ಪ್ರತಿಭಟನೆ ಮುಂದುವರೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.