ಕೋಲ್ಕತ್ತ: ರಾಜಭವನ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ನೀಡಿದ್ದಾರೆ ಎನ್ನಲಾದ ಅಸಹ್ಯಕರ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಶುಕ್ರವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
‘ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿಯ ಕೆಲ ಮುಖಂಡರ ವಿರುದ್ಧ ಕಲ್ಕತ್ತ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.
‘ರಾಜಭವನದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕಾರಣದಿಂದಾಗಿ ಅಲ್ಲಿಗೆ ಹೋಗಲು ಹೆದರಿಕೆಯಾಗುತ್ತಿದೆ ಎಂಬುದಾಗಿ ಮಹಿಳೆಯರು ನನ್ನ ಬಳಿ ದೂರಿದ್ದಾರೆ’ ಎಂದು ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದರು. ಇದರ ಬೆನ್ನಲ್ಲೇ, ಅವರ ವಿರುದ್ಧ ರಾಜ್ಯಪಾಲ ಬೋಸ್ ಪ್ರಕರಣ ದಾಖಲಿಸಿದ್ದಾರೆ.
ರಾಜ್ಯಪಾಲ ಬೋಸ್ ಅವರು ತನ್ನ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದಾಗಿ ರಾಜಭವನದಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರಿ ಮಾಡುತ್ತಿರುವ ಮಹಿಳೆಯೊಬ್ಬರು ಮೇ 2ರಂದು ಆರೋಪಿಸಿದ್ದರು. ಈ ಕುರಿತು ಕೋಲ್ಕತ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.