ಗುವಾಹಟಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆ ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಯಲಾಗಿದೆ. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಟ್ರಾಫಿಕ್ ಜಾಮ್ ತಪ್ಪಿಸಲು ಯಾತ್ರೆಗೆ ನಗರ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು.
ಗುವಾಹಟಿ ಚೌಕ್‌ನಲ್ಲಿ ಬೃಹತ್ ಜನಸಮೂಹ ಜಮಾಯಿಸಿತ್ತು. ಕಾಂಗ್ರೆಸ್ ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದಾರೆ ಎಂದು ವರದಿಯಾಗಿದೆ.
ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿ ಯಾತ್ರೆಯನ್ನು ನಿಲ್ಲಿಸಲಾಗಿದೆ. 'ಭಾರತ್ ಜೋಡೊ ನ್ಯಾಯ ಯಾತ್ರೆ'ಯ ದೊಡ್ಡ ಧ್ವನಿಯಿಂದ ಹೆದರಿದ ಅಸ್ಸಾಂ ಸರ್ಕಾರ ಇಂತಹ ಹೇಡಿತನದ ಮತ್ತು ನಾಚಿಕೆಗೇಡಿನ ಕೃತ್ಯ ನಡೆಸಿದೆ. ಇದು ಜನರ ಧ್ವನಿ ಎಂಬುದನ್ನು ಬಿಜೆಪಿ ಮರೆಯಬಾರದು. ಯಾವುದೇ ಬೆಲೆ ತೆತ್ತರೂ ಅದನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ನಮ್ಮ ಹಾದಿಯಲ್ಲಿರುವ ಈ ಮುಳ್ಳುಗಳು ನಮ್ಮ ಧೈರ್ಯವನ್ನು ಹೆಚ್ಚಿಸುತ್ತಿವೆ ಮತ್ತು ನಮ್ಮನ್ನು ಬಲಪಡಿಸುತ್ತಿವೆ. ನಾವು ಯಾರಿಗೂ ಹೆದರುವುದಿಲ್ಲ. 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಮುಂದುವರೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ.
ಗಾಯಗೊಂಡ ಪಕ್ಷದ ಕಾರ್ಯಕರ್ತರನ್ನು ತೋರಿಸುವ ವಿಡಿಯೊವನ್ನು ಸಹ ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಅಲ್ಲದೇ ಸದ್ಯ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದೂ ಹೇಳಿದೆ.
ಹಿಂದೆ ಬಜರಂಗದಳ ಈ ರೀತಿಯ ರ‍್ಯಾಲಿ ನಡೆಸಿತ್ತು. ಜೆ.ಪಿ ನಡ್ಡಾ ಕೂಡ ಇಲ್ಲಿ ರ‍್ಯಾಲಿ ನಡೆಸಿದ್ದರು. ಆದರೆ ಅವರನ್ನು ತಡೆಯಲಿಲ್ಲ. ನಮ್ಮನ್ನು ತಡೆಯಲಾಗಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ಯುವಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಬಿಜೆಪಿಯವರು ನಿಮ್ಮನ್ನು ಗುಲಾಮರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಲು ಸಾಧ್ಯವಿಲ್ಲ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.