ನವದೆಹಲಿ: ಗುಜರಾತ್‌ನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರು ಸೋಮವಾರ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯ ರಾಜಧಾನಿ ಗಾಂಧಿನಗರದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಭೂಪೇಂದ್ರ ಪಟೇಲ್ ಅವರ ಪ್ರಮಾಣವಚನ ಕಾರ್ಯಕ್ರಮದ ವಿಶೇಷತೆಗಳು ಇಲ್ಲಿವೆ.
1. ಭೂಪೇಂದ್ರ ಪಟೇಲ್ ಅವರೊಂದಿಗೆ ಸುಮಾರು 25 ಮಂದಿ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
2. ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಹಿರಿಯ ನಾಯಕರಾದ ಬಿ.ಎಲ್ ಸಂತೋಷ್ ಸೇರಿ ಗುಜರಾತ್ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ ನಾಯಕರು, ಸಂಸದರು ಇರಲಿದ್ದಾರೆ.
3. ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಹಾರಾಷ್ಟ್ರದ ಸಿಎಂ ಹಾಗೂ ಡಿಸಿಎಂ ಏಕನಾಥ ಶಿಂಧೆ ಹಾಗೂ ದೇವೇಂದ್ರ ಫಡಣವೀಸ್ ಭಾಗಿಯಾಗಲಿದ್ದಾರೆ.
4. ಕಾರ್ಯಕ್ರಮಕ್ಕಾಗಿ ಗಾಂಧಿನಗರದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಮೂರು ವೇದಿಕೆಗಳು ಇದ್ದು, ಮಧ್ಯದ ವೇದಿಕೆಯಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ಆಸೀನರಾಗಲಿದ್ದರೆ.
5. ಮುಖ್ಯ ವೇದಿಕೆಯ ಬಲ ಭಾಗದ ಇನ್ನೊಂದು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅತಿ ಗಣ್ಯರು ಕುಳಿತುಕೊಳ್ಳಲಿದ್ದಾರೆ. ಎಡಭಾಗದ ವೇದಿಕೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಹ್ವಾನಿಸಲಾದ 200 ಮಂದಿ ಸಾಧು ಸಂತರು ಇರಲಿದ್ದಾರೆ.
6. ಎಲ್ಲಾ ವಿಭಾಗದ ಜನರಿಗೂ ಕಾರ್ಯಕ್ರಮಕ್ಕೆ ಪ್ರವೇಶ ಇದ್ದು, ಪಾಟೀದಾರ್, ಹಿಂದುಳಿದ ವರ್ಗ, ಎಸ್‌ಟಿ, ಎಸ್ಸಿ, ಮಹಿಳೆಯರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.