ಗಾಂಧಿನಗರ: ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಅವರು ಸೋಮವಾರ ಗುಜರಾತ್ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು.
ಗಾಂಧಿನಗರದಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಉಪಸ್ಥಿತರಿದ್ದರು.
ವಿಧಾನಸಭೆಯ ಬಳಿಯ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು 18ನೇ ಮುಖ್ಯಮಂತ್ರಿ ಪಟೇಲ್ ಅವರಿಗೆ ಅಧಿಕಾರ ವಿಧಿ ಬೋಧಿಸಿದರು.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 17 ಮತ್ತು ಎಎಪಿ 5 ಕ್ಷೇತ್ರಗಳನ್ನು ಗೆದ್ದಿದೆ.
ಚುನಾವಣಾ ಫಲಿತಾಂಶದ ನಂತರ ಹೊಸ ಸರ್ಕಾರ ರಚನೆಗಾಗಿ ಪಟೇಲ್ ಶುಕ್ರವಾರ ತಮ್ಮ ಇಡೀ ಸಂಪುಟದೊಂದಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಶನಿವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ನಂತರ ರಾಜ್ಯಪಾಲರನ್ನು ಭೇಟಿಯಾಗಿ ಮುಂದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು.
ಘಟ್ಲೋಡಿಯಾ ವಿಧಾನಸಭಾ ಕ್ಷೇತ್ರದಿಂದ 1.92 ಲಕ್ಷ ಮತಗಳ ಅಂತರದಿಂದ ಗೆದ್ದಿರುವ ಪಟೇಲ್, ಕಡ್ವಾ ಪಾಟಿದಾರ್ ಉಪ-ಪಂಗಡದಿಂದ ಮುಖ್ಯಮಂತ್ರಿಯಾದ ಮೊದಲಿಗರೂ ಹೌದು. 2021ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಕೆಳಗಿಳಿಸಿ ಪಟೇಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು.
ಭೂಪೇಂದ್ರ ಪಟೇಲ್ ಅವರೊಂದಿಗೆ 16 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಪೈಕಿ ಒಬ್ಬ ಮಹಿಳಾ ಶಾಸಕಿಯೂ ಅಧಿಕಾರ ಸ್ವೀಕಾರ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.