ADVERTISEMENT

'ಅಗ್ನಿಪಥ' ವಿರುದ್ಧ ಪ್ರತಿಭಟನೆ: ಬಿಹಾರ ಉಪಮುಖ್ಯಮಂತ್ರಿ ಮನೆ ಮೇಲೆ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜೂನ್ 2022, 6:55 IST
Last Updated 17 ಜೂನ್ 2022, 6:55 IST
ಅಗ್ನಿಪಥ ಯೋಜನೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ– ಸಾಂದರ್ಭಿಕ ಚಿತ್ರ
ಅಗ್ನಿಪಥ ಯೋಜನೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ– ಸಾಂದರ್ಭಿಕ ಚಿತ್ರ   

ಪಟ್ನಾ: ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ 'ಅಗ್ನಿಪಥ' ವಿರುದ್ಧ ಬಿಹಾರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮತ್ತಷ್ಟು ತೀವ್ರಗೊಂಡಿದೆ.

ಉದ್ಯೋಗಾಕಾಂಕ್ಷಿಗಳು ರೈಲುಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ದಾಳಿ ನಡೆಸುತ್ತಿದ್ದಾರೆ.

ಇದೇ ವೇಳೆ, ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆತಿಯಾದಲ್ಲಿರುವ ಉಪಮುಖ್ಯಮಂತ್ರಿ ರೇಣು ದೇವಿ ಅವರ ಮನೆ ಮೇಲೆ ದಾಳಿ ನಡೆದಿದೆ.

ADVERTISEMENT

ಘಟನೆ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿರುವ ರೇಣು ದೇವಿ ಪುತ್ರ, ‘ಬೆತಿಯಾದಲ್ಲಿರುವ ನಮ್ಮ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಇದರಿಂದ ನಮಗೆ ಸಾಕಷ್ಟು ಹಾನಿಯಾಗಿದೆ. ತಮ್ಮ ತಾಯಿ ಪಟ್ನಾದಲ್ಲಿದ್ದಾರೆ’ ಎಂದು ತಿಳಿಸಿದ್ದಾರೆ.

ಈ ಬಗ್ಗೆ ‘ಎನ್‌ಡಿಟಿವಿ’ಗೆ ಹೇಳಿಕೆ ನೀಡಿರುವ ರೇಣು ದೇವಿ, ‘ಇಂತಹ ಹಿಂಸಾಚಾರವು ಸಮಾಜಕ್ಕೆ ತುಂಬಾ ಅಪಾಯಕಾರಿ’ ಎಂದು ತಿಳಿಸಿದ್ದಾರೆ.

ಅಗ್ನಿಪಥ ಯೋಜನೆ ವಿರುದ್ಧ ಬಿಹಾರ ಮಾತ್ರವಲ್ಲದೆ, ಉತ್ತರ ಪ್ರದೇಶದ, ರಾಜಸ್ಥಾನ, ತೆಲಂಗಾಣ ಹಾಗೂ ಹರಿಯಾಣದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ.

ಸೇನಾ ಪಡೆಗಳಿಗೆ ಯುವ ಜನರನ್ನು ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ ಯೋಜನೆ’ಯನ್ನು ಕೇಂದ್ರ ಸರ್ಕಾರವು ಮಂಗಳವಾರ ಪ್ರಕಟಿಸಿತ್ತು. ಇದಕ್ಕೆ ಪ್ರತಿಪಕ್ಷಗಳಿಂದಲೂ ವಿರೋಧ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.