ADVERTISEMENT

ಬಿಲ್ಕಿಸ್ ಬಾನೊ ಪ್ರಕರಣ | ಮದುವೆಯಲ್ಲಿ ಪಾಲ್ಗೊಳ್ಳಲು ಅಪರಾಧಿಗೆ ಪೆರೋಲ್– HC

ಪಿಟಿಐ
Published 23 ಫೆಬ್ರುವರಿ 2024, 16:04 IST
Last Updated 23 ಫೆಬ್ರುವರಿ 2024, 16:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಅಹಮದಾಬಾದ್: ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕೋರಿದ್ದ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗೆ 10 ದಿನಗಳ ಪೆರೋಲ್‌ ಅನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ಮಂಜೂರು ಮಾಡಿದೆ. 

ಗುಜರಾತ್‌ನ ಗೋಧ್ರಾದಲ್ಲಿ 2002ರಲ್ಲಿ ನಡೆದ ಗಲಬೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಹಾಗೂ ಅವರ ಕುಟುಂಬದ ಏಳು ಸದಸ್ಯರ ಹತ್ಯೆಗೈದಿದ್ದ 11 ಜನರಲ್ಲಿ ಪೆರೋಲ್ ಪಡೆದ ರಮೇಶ್ ಚಂದನಾ ಕೂಡಾ ಒಬ್ಬ. ಕಳೆದ ಒಂದು ವಾರದಲ್ಲಿ ಪೆರೋಲ್ ಪಡೆದ ಇದೇ ಪ್ರಕರಣದ 2ನೇ ವ್ಯಕ್ತಿ ಈತ. 

ಮಾರ್ಚ್ 5ರಂದು ನಡೆಯುವ ಸೋದರಿಯ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ತನಗೆ 10 ದಿನಗಳ ಪೆರೋಲ್ ನೀಡಬೇಕು ಎಂದು ಚಂದನಾ ಹೈಕೋರ್ಟ್ ಮೊರೆ ಹೋಗಿದ್ದ. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಪೆರೋಲ್ ಮಂಜೂರು ಮಾಡಿದೆ.

ADVERTISEMENT

ಗುಜರಾತ್ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವಂತೆ, 2008ರಿಂದ 1,198 ದಿನಗಳ ಪೆರೋಲ್ ಹಾಗೂ 378 ದಿನಗಳ ಫರ್ಲೋವನ್ನು ಚಂದನಾ ಅನುಭವಿಸಿದ್ದಾನೆ ಎಂದಿದೆ. 

ಇದೇ ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೀಪ್ ಮೋಧಿಯಾ ಕೂಡಾ ಫೆ. 7ರಿಂದ 11ರವರೆಗೆ ಪೆರೋಲ್‌ ಮೇಲೆ ಹೊರಗೆ ಬಂದಿದ್ದ.

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಸುರಕ್ಷಿತ ಜಾಗಕ್ಕೆ ತೆರಳುತ್ತಿದ್ದ ಬಿಲ್ಕಿಸ್‌ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅವರ ಮೂರು ವರ್ಷದ ಮಗಳೂ ಸೇರಿದಂತೆ, ಕುಟುಂಬದ 7 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನು, ಐದು ತಿಂಗಳ ಗರ್ಭಿಣಿಯೂ ಆಗಿದ್ದರು.

ಈ ಪ್ರಕರಣದ 11 ಅಪರಾಧಿಗಳಿಗೆ 2008ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ, ಗುಜರಾತ್ ಸರ್ಕಾರದ ಆದೇಶದ ಮೇರೆಗೆ ಎಲ್ಲ ಅಪರಾಧಿಗಳು 2022ರ ಆಗಸ್ಟ್‌ 15ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ಅಪರಾಧಿಗಳಿಗೆ ಕ್ಷಮಾದಾನ ನೀಡುವ ಪ್ರಕ್ರಿಯೆಯಲ್ಲಿ ಗುಜರಾತ್ ಸರ್ಕಾರವು ತನ್ನ ವಿವೇಚನಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಜನವರಿ 8ರಂದು ಚಾಟಿ ಬೀಸಿದ್ದ ಸುಪ್ರೀಂ ಕೋರ್ಟ್, ಅಪರಾಧಿಗಳು ಮುಂದಿನ 2 ವಾರದೊಳಗೆ ಜೈಲಿಗೆ ಹಿಂದಿರುಗಬೇಕು ಎಂದು ಆದೇಶ ಹೊರಡಿಸಿತ್ತು. 

ಪೊಲೀಸರಿಗೆ ಶರಣಾಗಲು ನೀಡಲಾಗಿರುವ ಸಮಯಾವಕಾಶವನ್ನು ವಿಸ್ತರಿಸುವಂತೆ ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳಾದ ಬಕಾಭಾಯಿ ವೋಹಾನಿಯಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಗೋವಿಂದ್ ನಾಯ್, ಜಸ್ವಂತ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನಾ ಮತ್ತು ಶೈಲೇಶ್ ಭಟ್ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.