ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಭಾರತೀಯ ಕುಸ್ತಿ ಫೆಡರೇಷನ್‌ನ (ಡಬ್ಲ್ಯುಎಫ್‌ಐ) ನೂತನ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ ಗುಂಪಿನ ಹಲವರು ಡಬ್ಲ್ಯುಎಫ್‌ಐನ ಪ್ರಮುಖ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ.
ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಸಂಜಯ್ ಅವರು, 40 ಮತಗಳನ್ನು ಗಳಿಸುವ ಮೂಲಕ ಪ್ರಮುಖ ಎದುರಾಳಿ ಅನಿತಾ ಶೆರಾಣ್ ಅವರನ್ನು ಮಣಿಸಿದರು. ಆದಾಗ್ಯೂ ಅನಿತಾ ಅವರ ಆಪ್ತ ಪ್ರೇಮ್‌ಚಂದ್ ಲೊಚಬ್ ಅವರು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿದ್ದ ಬ್ರಿಜ್‌ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ನಡೆಸಿದ್ದ ಹೋರಾಟಕ್ಕೆ ಈ ಫಲಿತಾಂಶದಿಂದ ಹಿನ್ನಡೆಯಾದಂತಾಗಿದೆ.
ಸಂಜಯ್ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದ ಕುಸ್ತಿಪಟುಗಳು
ಬ್ರಿಜ್‌ಭೂಷಣ್ ಅವರ ಆಪ್ತರಾದ ಸಂಜಯ್ ಸಿಂಗ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನೋಡಿಕೊಳ್ಳಬೇಕು ಎಂದು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಅವರು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದರು.
ಈ ಸಂಬಂಧ ಅವರು ಠಾಕೂರ್ ಅವರನ್ನು ಸೋಮವಾರ ಭೇಟಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.