ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆಯುವ ಸಾಧ್ಯತೆ ಇತ್ತು. ಇದರಿಂದ ಗಾಬರಿಗೊಂಡಿರುವ ಬಿಜೆಪಿಯು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ನಕಲಿ ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಿದೆ ಎಂದು ಎಎಪಿ ಆರೋಪಿಸಿದೆ.
ಇದೇ ಪ್ರಕರಣ ಸಂಬಂಧ ದೆಹಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಇಂದು (ಬುಧವಾರ) ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲು ಸಿಬಿಐಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಕೇಜ್ರಿವಾಲ್ ಅವರನ್ನು 5 ದಿನಗಳವರೆಗೆ ಕಸ್ಟಡಿಗೆ ನೀಡುವಂತೆ ಸಿಬಿಐ ಮನವಿ ಮಾಡಿತ್ತು. ಇದಕ್ಕೆ ಕೋರ್ಟ್ ಸಮ್ಮತಿ ಸೂಚಿಸಿದೆ. ಏತನ್ಮಧ್ಯೆ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ.
‘ಸರ್ವಾಧಿಕಾರಿ ಧೋರಣೆಯು ಎಲ್ಲಾ ಮಿತಿಗಳನ್ನು ಮೀರಿದೆ. ಇಂದು ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಸಿಗುವ ಎಲ್ಲಾ ಸಾಧ್ಯತೆಗಳಿದ್ದವು. ಇದರಿಂದ ಗಾಬರಿಗೊಂಡಿರುವ ಬಿಜೆಪಿಯು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ನಕಲಿ ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಿದೆ. ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ತುಂಬಾ ಕಡಿಮೆಯಾಗಿದೆ. ನೀವು (ಬಿಜೆಪಿಗರು) ಎಷ್ಟೇ ದಬ್ಬಾಳಿಕೆ ನಡೆಸಿದರೂ ಕೇಜ್ರಿವಾಲ್ ತಲೆಬಾಗುವುದಿಲ್ಲ’ ಎಂದು ಎಎಪಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.