ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ನೇತೃತ್ವದ ಮೇಘಾಲಯ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯಲು ಬಿಜೆಪಿ ಚಿಂತನೆ ನಡೆಸಿದೆ.
ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಬಿಜೆಪಿ ಹಿಂಪಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ, ಮೇಘಾಲಯ ಉಸ್ತುವಾರಿ ಎಂ. ಚೂಬಾ ತಿಳಿಸಿದ್ದಾರೆ.
ಮೇಘಾಲಯದ ಆರು ಪಕ್ಷಗಳ ಮೈತ್ರಿ ಸರ್ಕಾರದಲ್ಲಿ ಇಬ್ಬರು ಶಾಸಕರನ್ನು ಹೊಂದಿರುವ ಬಿಜೆಪಿಯ ಪಾಲು ಬಹಳ ಚಿಕ್ಕದಾಗಿದೆ.
ಎಂಡಿಎ ಸರ್ಕಾರಕ್ಕೆ ಬೆಂಬಲ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಿವಿಧ ಹಂತಗಳಲ್ಲಿ ಸಮಾಲೋಚನೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರದ ವಿರುದ್ಧದ ವಿವಿಧ ಭ್ರಷ್ಟಾಚಾರ ಆರೋಪಗಳ ವರದಿಗಳನ್ನು ಪಕ್ಷ ಪರಿಶೀಲನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
ಮೇಘಾಲಯದ ಬಿಜೆಪಿ ಉಪಾಧ್ಯಕ್ಷ ಬರ್ನಾಡ್ ಎನ್. ಮರಾಕ್ ಅವರು ವೆಸ್ಟ್ ಗಾರೋ ಹಿಲ್ಸ್ ಜಿಲ್ಲೆಯ ತುರಾದ ತಮ್ಮ ತೋಟದ ಮನೆಯಲ್ಲಿ, ಲೈಂಗಿಕ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿತ್ತು. ಬಳಿಕ ಅವರನ್ನು ಜುಲೈ 25ರಂದು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿತ್ತು. ಮರಾಕ್ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅವರ ವಿರುದ್ಧ ಆರೋಪ ಮಾಡಲಾಗಿದೆ ಎಂದು ಬಿಜೆಪಿ ಹೇಳಿತ್ತು. ಇದು ಮೇಘಾಲಯದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.