ಭೋಪಾಲ್: ಮುಂಬರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜ್ಯದಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ಯನ್ನು ಹಮ್ಮಿಕೊಳ್ಳಲು ಮುಂದಾಗಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಜಯ ಸಂಕಲ್ಪ ಯಾತ್ರೆಯನ್ನು ಸೆಪ್ಟೆಂಬರ್‌ನಲ್ಲಿ ಕೈಗೊಳ್ಳುವ ಸಾಧ್ಯತೆಯಿದೆ. ಅವುಗಳ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
ಬುಧವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿಯ ನಾಲ್ಕು ಗಂಟೆಗಳ ಸುದೀರ್ಘ ಸಭೆಯ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ಪದಾಧಿಕಾರಿ ತಿಳಿಸಿದ್ದಾರೆ.
ವಿಜಯ ಸಂಕಲ್ಪ ಯಾತ್ರೆಯನ್ನು ಉಜ್ಜಯಿನಿ, ಜಬಲ್‌ಪುರ, ಸಾಗರ, ಗ್ವಾಲಿಯರ್ ಮತ್ತು ಚಿತ್ರಕೂಟ ನಗರಗಳಲ್ಲಿ ಪ್ರಾರಂಭಿಸಲಾಗುವುದು. ಉಜ್ಜಯಿನಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳುವ ಮೂಲಕ ಮಾಲ್ವಾ ಪ್ರದೇಶವನ್ನು ತಲುಪುವ ಗುರಿಯನ್ನು ಪಕ್ಷವು ಹೊಂದಿದೆ. ಅದೇ ರೀತಿ ಜಬಲ್‌ಪುರ ಮತ್ತು ಸಾಗರದಲ್ಲಿ ಯಾತ್ರೆಯನ್ನು ಕೈಗೊಳ್ಳುವ ಮೂಲಕ ಮಹಾಕೋಶಲ ಮತ್ತು ಬುಂದೇಲ್‌ಖಾನ್ ಪ್ರದೇಶಗಳ ಮತದಾರರನ್ನು ತಲುಪುವ ಉದ್ದೇಶವಿದೆ. ಗ್ವಾಲಿಯರ್ ಮತ್ತು ಚಿತ್ರಕೂಟದಲ್ಲಿನ ಯಾತ್ರೆಗಳು ಚಂಬಲ್ ಮತ್ತು ವಿಂಧ್ಯಾ ಪ್ರದೇಶಗಳನ್ನು ಒಳಗೊಂಡಿರುತ್ತವೆ ಎಂದು ಪದಾಧಿಕಾರಿ ತಿಳಿಸಿದ್ದಾರೆ.
ಈ ಯಾತ್ರೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರನ್ನು ಕರೆಸಲು ಪಕ್ಷವು ಯೋಜಿಸಿದೆ. ಈ ವರ್ಷದ ಆರಂಭದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಮಾರ್ಚ್‌ನಲ್ಲಿ ಬಿಜೆಪಿಯು ಇಂತಹ ನಾಲ್ಕು ಯಾತ್ರೆಗಳನ್ನು ಕೈಗೊಂಡಿತು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದರಿಂದ ಕೇಸರಿ ಪಕ್ಷವು ಕರ್ನಾಟಕದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ವಿಫಲವಾಯಿತು.
ಮಧ್ಯಪ್ರದೇಶದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ‘ಜನ ಆಶೀರ್ವಾದ ಯಾತ್ರೆ’ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.