ADVERTISEMENT

MCDಗೆ ಸದಸ್ಯರನ್ನು ನೇಮಿಸುವ ಅಧಿಕಾರ LGಗೆ ಇದೆ: ಕೋರ್ಟ್ ತೀರ್ಪು ಸ್ವಾಗತಿಸಿದ BJP

ಪಿಟಿಐ
Published 5 ಆಗಸ್ಟ್ 2024, 9:51 IST
Last Updated 5 ಆಗಸ್ಟ್ 2024, 9:51 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗೆ (ಎಂಸಿಡಿ) ವಿವಿಧ ಕ್ಷೇತ್ರಗಳ ಗಣ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ ಹೊಂದಿದ್ದಾರೆ ಎಂಬ ಸುಪ್ರೀಂ ಕೋರ್ಟ್‌ ತೀರ್ಪನ್ನು ಬಿಜೆಪಿ ಸ್ವಾಗತಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ, ದೆಹಲಿ ಮಹಾನಗರ ಪಾಲಿಕೆಗೆ ಗಣ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ ಅವರು ದಶಕಗಳಿಂದ ಚಲಾಯಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ.

‘ಎಎಪಿ ನಾಯಕರು ಲೆಫ್ಟಿನೆಂಟ್ ಗವರ್ನರ್‌ ಏನು ಮಾಡಿದರೂ ಪ್ರಶ್ನಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಇದು ಅವರ ಅರಾಜಕತಾವಾದಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಎಎಪಿ ಸಂಸದ ಸಂಜಯ್ ಸಿಂಗ್ ನೀಡಿರುವ ಪ್ರತಿಕ್ರಿಯೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದು ಹೇಳಿದ್ದಾರೆ.

ADVERTISEMENT

ದೆಹಲಿ ಸರ್ಕಾರದ ಸಲಹೆ ಇಲ್ಲದೆ ದೆಹಲಿ ಮಹಾನಗರ ಪಾಲಿಕೆಗೆ 10 ಹಿರಿಯ ಸದಸ್ಯರನ್ನು ನಾಮ ನಿರ್ದೇಶನ ಮಾಡಿದ ಲೆಫ್ಟಿನೆಂಟ್ ಗವರ್ನರ್‌ ಅವರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ.

ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರ ದೆಹಲಿ ಮಹಾನಗರ ಪಾಲಿಕೆ ಕಾಯ್ದೆಯಲ್ಲಿ ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ಕಲ್ಪಿಸಲಾಗಿದೆ. ಹೀಗಾಗಿ ಅವರಿಗೆ ದೆಹಲಿ ಸರ್ಕಾರದ ಯಾವುದೇ ಸಲಹೆ ಹಾಗೂ ಬೆಂಬಲ ಬೇಕಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದೀವಾಲ ಹಾಗೂ ಪಿ.ಎಸ್‌ ನರಸಿಂಹ ಅವರಿದ್ದ ಪೀಠ ತೀರ್ಪು ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಎಎಪಿ ಸಂಸದ ಸಂಜಯ್ ಸಿಂಗ್, ‘‌ಸುಪ್ರೀಂ ಕೋರ್ಟ್‌ ತೀರ್ಪು ‘ದುರದೃಷ್ಟಕರ’ ಮತ್ತು ‘ಪ್ರಜಾಪ್ರಭುತ್ವದ ವಿರೋಧಿ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.