ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಗೆಲುವಿಗೆ ಬಿಜೆಪಿ ಸೇಡು ತೀರಿಸಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ ಎಂದು ಪಕ್ಷದ ನಾಯಕಿ ಆತಿಶಿ ಗುರುವಾರ ಆರೋಪಿಸಿದ್ದಾರೆ.
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಫೆಬ್ರುವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಏಳನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದೆ.
ಈ ಹಿಂದೆ ಒಂದು ಸಲವೂ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಲಿಲ್ಲ. ಇದರ ವಿರುದ್ಧ ಇ.ಡಿ ಕೋರ್ಟ್ ಮೆಟ್ಟಿಲೇರಿತ್ತು.
ನ್ಯಾಯಾಲಯದ ತೀರ್ಪಿನವರೆಗೆ ಇ.ಡಿ ಏಕೆ ಕಾಯುತ್ತಿಲ್ಲ ಎಂದು ಪ್ರಶ್ನಿಸಿರುವ ಆತಿಶಿ, ಸಮನ್ಸ್ ನೀಡುವ ಮೂಲಕ ಕೇಜ್ರಿವಾಲ್ ಹಾಗೂ ಎಎಪಿ ಮೇಲೆ ಭಯ ಹುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇ.ಡಿ ಸಮನ್ಸ್‌ಗೆ ಕೇಜ್ರಿವಾಲ್ ಅಥವಾ ಎಎಪಿ ಹೆದರುವುದಿಲ್ಲ. ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಎಎಪಿಯ ಕಾರ್ಪೊರೇಟರ್ ಕುಲದೀಪ್ ಕುಮಾರ್ ಅವರು ಚಂಡೀಗಢ ಮೇಯರ್ ಹುದ್ದೆಗೆ ಆಯ್ಕೆ ಆಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಮೂಲಕ ಪ್ರಜಾಪ್ರಭುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದರ ವಿರುದ್ಧ ಬಿಜೆಪಿ ಸೇಡು ತೀರಿಸಿಕೊಳ್ಳಲು ಸಮನ್ಸ್ ಜಾರಿ ಮಾಡಲಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.