ADVERTISEMENT

ವಿಜಯವಾಡ: ಪ್ರಧಾನಿ ಭದ್ರತೆಯಲ್ಲಿ ಲೋಪ; ಹೆಲಿಕಾಪ್ಟರ್ ಸಮೀಪ ಬಲೂನ್ ಹಾರಾಟ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 16:32 IST
Last Updated 4 ಜುಲೈ 2022, 16:32 IST
ಐಎಎನ್‌ಎಸ್ ಚಿತ್ರ
ಐಎಎನ್‌ಎಸ್ ಚಿತ್ರ   

ವಿಜಯವಾಡ: ಇಲ್ಲಿನ ಗನ್ನಾವರಂ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಪ್ಪು ಬಲೂನ್‌ಹಾರಾಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮೂವರು ಮುಖಂಡರನ್ನು ಆಂಧ್ರಪ್ರದೇಶದ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಪ್ರಧಾನಿ ಭದ್ರತೆಯಲ್ಲಿ ಲೋಪ ಉಂಟಾಗಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಭಾಗವಾಗಿ ಮೋದಿ ಅವರ ಭೇಟಿಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಪ್ಪು ಬಲೂನ್‌ಗಳನ್ನು ಹಾರಿಸಿದ್ದರು.

ಪ್ರಧಾನಿ ಅವರಿದ್ದ ಹೆಲಿಕಾಪ್ಟರ್ ಭೀಮಾವರಂಗೆ ಟೇಕಾಫ್ ಆಗುತ್ತಿದ್ದಂತೆಯೇ ವಿಮಾನ ನಿಲ್ದಾಣದ ಬಳಿ ಬಲೂನ್‌ಗಳನ್ನು ಆಕಾಶಕ್ಕೆ ಬಿಡಲಾಗಿದೆ.

ಗನ್ನಾವರಂ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ, ಹೆಲಿಕಾಪ್ಟರ್ ಮೂಲಕ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂಗೆ ತೆರಳಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಪ್ರದೇಶದ ವಾಯು ಮಾರ್ಗವನ್ನು ನಿಷೇಧಿತ ವಲಯ ಎಂದು ಘೋಷಿಸಿದ್ದರೂ ಕಪ್ಪು ಬಲೂನ್ ಹಾರಿಸಿರುವುದು ಭಾರಿ ಭದ್ರತಾ ಲೋಪ ಎಂದು ಪರಿಗಣಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.