ನವದೆಹಲಿ: ಷೇರುಗಳ ಮೌಲ್ಯವನ್ನು ಕೃತಕವಾಗಿ ಏರಿಕೆ–ಇಳಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಅದಾನಿ ಕಂಪನಿ ವಿರುದ್ಧ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿವೆ.
ಇದರಿಂದಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2ರ ವರೆಗೆ ಹಾಗೂ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2.30ರ ವರೆಗೆ ಮುಂದೂಡಲಾಗಿದೆ.
ಅದಾನಿ ಕಂಪನಿ ವಿಚಾರವಾಗಿ ಸಂಸತ್ತಿನಲ್ಲಿ ಗುರುವಾರವೂ ಗದ್ದಲವೆದ್ದಿತ್ತು. ಹೀಗಾಗಿ ಉಭಯ (ಲೋಕಸಭೆ ಹಾಗೂ ರಾಜ್ಯಸಭೆ) ಸದನಗಳನ್ನು ಇವತ್ತಿಗೆ (ಶುಕ್ರವಾರಕ್ಕೆ) ಮುಂದೂಡಲಾಗಿತ್ತು. ಆದರೆ, ಇಂದು ಕಲಾಪ ಆರಂಭವಾಗುತ್ತಿದ್ದಂತೆ, ಪ್ರತಿಪಕ್ಷಗಳ ನಾಯಕರು ಘೋಷಣೆಗಳನ್ನು ಕೂಗಲಾರಂಭಿಸಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು, ಪ್ರಶ್ನೋತ್ತರದ ಅವಧಿಯಲ್ಲಿ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ನಾಯಕರಲ್ಲಿ ಮನವಿ ಮಾಡಿದರು. ಮುಂದುವರಿದು, ಬಜೆಟ್ ಅಧಿವೇಶನದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮೊದಲ ಭಾಷಣ ಮಾಡಿದ್ದರು. ಆ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಎಲ್ಲರೂ ಭಾಗವಹಿಸುವಂತೆ ಹೇಳಿದರು.
ಹಾಗೆಯೇ, ತಮ್ಮ ವಿಚಾರಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷಗಳಿಗೆ ಸಾಕಷ್ಟು ಸಮಯಾವಕಾಶ ನೀಡುವುದಾಗಿಯೂ ಭರವಸೆ ನೀಡಿದರು.
ಆದಾಗ್ಯೂ ಪಟ್ಟು ಸಡಿಲಿಸದ ವಿರೋಧ ಪಕ್ಷಗಳು ಪ್ರತಿಭಟನೆ ಹಾಗೂ ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದವು. ಹೀಗಾಗಿ ಕಲಾಪವನ್ನು ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.