ಶ್ರೀನಗರ: ಆಳವಾದ ಕಣಿವೆಗೆ ಬಸ್ ಉರುಳಿಇಂಡೊ–ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ) ಪಡೆಯ ಏಳು ಯೋಧರು ಮಂಗಳವಾರ ಮೃತಪಟ್ಟಿದ್ದಾರೆ.
‘ಬಸ್‌ನಲ್ಲಿದ್ದ ಇತರ 32 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲಾ ಅಮರನಾಥ ಯಾತ್ರೆ ವೇಳೆ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಅಲ್ಲಿಂದ ಮರಳುತ್ತಿದ್ದಾಗ ಅವಘಡ ನಡೆದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
‘ಬಸ್‌ನಲ್ಲಿ ಐಟಿಬಿಪಿಯ 37 ಮಂದಿ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ಇಬ್ಬರು ಸಿಬ್ಬಂದಿ ಇದ್ದರು. ಚಂದನವಾಡಿ ಹಾಗೂ ಪಹ ಲ್ಗಾಮ್ ನಡುವೆ ಇರುವ ಆಳವಾದ ಕಣಿವೆಗೆ ಬಸ್ ಉರುಳಿದೆ. ಇಬ್ಬರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ’ ಎಂದು ಹೇಳಿದ್ದಾರೆ.
‘ಗಾಯಗೊಂಡಿರುವವರ ಪೈಕಿ ಎಂಟು ಮಂದಿಯ ಸ್ಥಿತಿ ಗಂಭೀರ ವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಶ್ರೀನಗರಕ್ಕೆ ಕೊಂಡೊಯ್ಯಲಾಗಿದೆ. ಉಳಿದವರಿಗೆ ಅನಂತನಾಗ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
‘ಬಸ್‌ನ ‘ಬ್ರೇಕ್’ ವಿಫಲವಾಗಿ ಈ ದುರ್ಘಟನೆ ಸಂಭವಿಸಿದೆಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಐಟಿಬಿಪಿ ವಕ್ತಾರರೊಬ್ಬರು ಹೇಳಿದ್ದಾರೆ.
ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ನೆರವು ಒದಗಿಸುವುದಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.