ADVERTISEMENT

ಪಶ್ಚಿಮ ಬಂಗಾಳ: ಇ.ಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ತಡೆ

ಪಿಟಿಐ
Published 11 ಜನವರಿ 2024, 14:42 IST
Last Updated 11 ಜನವರಿ 2024, 14:42 IST
<div class="paragraphs"><p>ಇ.ಡಿ</p></div>

ಇ.ಡಿ

   

ಕೋಲ್ಕತ್ತ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿ ಕಲ್ಕತ್ತ ಹೈಕೋರ್ಟ್‌ ಗುರುವಾರ ಆದೇಶಿಸಿದೆ.   

ಟಿಎಂಸಿ ನಾಯಕ ಶಹಜಹಾನ್‌ ಶೇಖ್‌ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಸಲು ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಗೆ ತೆರಳಿದ್ದ ಇ.ಡಿ ಅಧಿಕಾರಿಗಳ ವಿರುದ್ಧ ನಝತ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಶೋಧ ಕಾರ್ಯದ ವೇಳೆ ಅಧಿಕಾರಿಗಳು ಜನರನ್ನು ಥಳಿಸಿದ್ದಾರೆ, ಕಳ್ಳತನ ಮಾಡಿದ್ದಾರೆ, ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂಥ ಕೃತ್ಯಗಳನ್ನು ಎಸಗಿದ್ದಾರೆ ಎಂದು ಎಫ್ಐಆರ್‌ನಲ್ಲಿ ಹೇಳಲಾಗಿದೆ.

ADVERTISEMENT

ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ ಎಂದು ಹೇಳಿರುವ ಇ.ಡಿ, ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಎಫ್‌ಐಆರ್‌ಗೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ಮಾರ್ಚ್‌ 30ರ ವರೆಗೆ ತಡೆ ನೀಡಿ ನ್ಯಾಯಮೂರ್ತಿ ರಾಜಶೇಖರ್‌ ಮಂಥಾ ಅವರು ಆದೇಶ ಹೊರಡಿಸಿದ್ದಾರೆ.

ಇದಕ್ಕೂ ಮೊದಲು, ಶೋಧ ಕಾರ್ಯ ಕೈಗೊಂಡಿದ್ದ ಅಧಿಕಾರಿಗಳ ಮೇಲೆ ಸೋಮವಾರದವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಮೂರ್ತಿ ಜಯ್‌ ಸೇನ್‌ಗುಪ್ತಾ ಅವರಿದ್ದ ಏಕಸದಸ್ಯ ಪೀಠವು ಮೌಖಿಕ ಆದೇಶ ನೀಡಿತ್ತು.

ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಶಹಜಹಾನ್‌ ನಿವಾಸದಲ್ಲಿ ಜನವರಿ 5ರಂದು ಶೋಧ ನಡೆಸಿದ್ದ ಇ.ಡಿ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಈ ವೇಳೆ ಮೂವರು ಅಧಿಕಾರಿಗಳ ಗಾಯಗೊಂಡಿದ್ದರು. ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.