ನವದೆಹಲಿ: ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಹಾಗೂ ಸುಲಭವಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಎದುರಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ನಡ್ಡಾ, 'ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿ ವರ್ಷ ಶೇ 2.5 ರಷ್ಟು ಪ್ರಕರಣಗಳು ಏರಿಕೆಯಾಗುತ್ತಿವೆ' ಎಂದು ತಿಳಿಸಿದ್ದಾರೆ.
ಪ್ರತಿ ವರ್ಷ 15.5 ಲಕ್ಷಕ್ಕೂ ಅಧಿಕ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ಪುರುಷರಲ್ಲಿ ಬಾಯಿ ಹಾಗೂ ಶ್ವಾಸಕೋಶ ಕ್ಯಾನ್ಸರ್, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದಿದ್ದಾರೆ.
'ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಾದ 131 ಔಷಧಿಗಳ ಪಟ್ಟಿ ಮಾಡಲಾಗಿದೆ. ಅವುಗಳ ಮೇಲ್ವಿಚಾರಣೆ ಮತ್ತು ಬೆಲೆಯನ್ನು ಸರ್ಕಾರ ನಿರ್ಧರಿಸುತ್ತದೆ. ಈ ಔಷಧಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ' ಎಂದು ನಡ್ಡಾ ಮಾಹಿತಿ ನೀಡಿದ್ದಾರೆ.
'ಔಷಧಿಗಳ 28 ವಿವಿಧ ಸಂಯೋಜನೆಗಳಿವೆ. ಅವು ಪಟ್ಟಿಯಲ್ಲಿ ಇಲ್ಲ. ಆದರೆ, ಅವುಗಳ ಬೆಲೆಯನ್ನೂ ರಾಷ್ಟ್ರೀಯ ಔಷಧ ದರ ನಿಗದಿ ಪ್ರಾಧಿಕಾರ (ಎನ್‌ಪಿಪಿಎ) ಹಾಗೂ ಕೇಂದ್ರ ಸರ್ಕಾರ ನಿಯಂತ್ರಿಸುತ್ತವೆ. ಕ್ಯಾನ್ಸರ್‌ಗೆ ಸಂಬಂಧಿಸಿದ ಔಷಧಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಪ್ರಯತ್ನಿಸುತ್ತಿದ್ದೇವೆ' ಎಂದು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.