ಕೋಲ್ಕತ್ತ: ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಆರ್.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಬಂಧಿಸಿದೆ.
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ನಾಶ ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿದೆ ಎಂದು ತನಿಖಾ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದಲ್ಲಿ ತಲಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಿಬಿಐ ಬಂಧಿಸಿದೆ. ಎಫ್‌ಐಆರ್ ದಾಖಲಿಸಲು ವಿಳಂಬ, ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪ ಇವರ ಮೇಲಿದೆ.
ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು. ಈ ಆರೋಪದ ಮೇಲೆ ಸೆಪ್ಟೆಂಬರ್ 2 ರಂದು ಘೋಷ್ ಅವರನ್ನು ಸಿಬಿಐ ಬಂಧಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.