ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.
ಈಗಾಗಲೇ ಕವಿತಾ (46) ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದ್ದು, ಅವರು ತಿಹಾರ್ ಜೈಲಿನಲ್ಲಿದ್ದಾರೆ.
ಇಲ್ಲಿನ ವಿಶೇಷ ನ್ಯಾಯಾಲಯದ ಅನುಮತಿ ಪಡೆದ ಬಳಿಕ ಸಿಬಿಐ ಅವರನ್ನು ಬಂಧಿಸಿದ್ದು, ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಅವರು ತಿಹಾರ್ ಜೈಲಿನಲ್ಲಿಯೇ ಉಳಿಯಲಿದ್ದಾರೆ.
ಒಂದು ವೇಳೆ ನ್ಯಾಯಾಲಯವು ಕವಿತಾ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಿದರೆ, ಏಜೆನ್ಸಿಯ ಪ್ರಧಾನ ಕಚೇರಿಗೆ ಅವರನ್ನು ಸ್ಥಳಾಂತರಿಸಲಾಗುತ್ತದೆ. ಅಲ್ಲಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆದು ಶನಿವಾರ ಕವಿತಾ ಅವರನ್ನು ಜೈಲಿನೊಳಗೆ ಸಿಬಿಐ ವಿಚಾರಣೆ ನಡೆಸಿತ್ತು. ಸಹ– ಆರೋಪಿ ಬುಚ್ಚಿ ಬಾಬು ಅವರ ಫೋನ್‌ನಲ್ಲಿ ನಡೆಸಲಾಗಿದ್ದ ವಾಟ್ಸ್‌ಆ್ಯಪ್ ಸಂಭಾಷಣೆಗಳ ಕುರಿತು ಮತ್ತು ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿರುವ ದಾಖಲೆಗಳ ಕುರಿತು ಹಾಗೂ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಎಎಪಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿರುವ ₹100 ಕೋಟಿ ಕಿಕ್‌ಬ್ಯಾಕ್ ಕುರಿತಂತೆ ಕವಿತಾ ಅವರ ವಿಚಾರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯವು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನ ನಿವಾಸದಿಂದ ಬಂಧಿಸಿತ್ತು. ನ್ಯಾಯಾಲಯವು ಮಂಗಳವಾರವಷ್ಟೇ ಅವರ ನ್ಯಾಯಾಂಗ ಬಂಧನವನ್ನು ಎರಡು ವಾರಗಳವರೆಗೆ ವಿಸ್ತರಿಸಿತ್ತು.
ಕವಿತಾ ಅವರು ಮೇಲ್ನೋಟಕ್ಕೆ ಸಾಕ್ಷ್ಯ ನಾಶಪಡಿಸಿದ್ದಷ್ಟೇ ಅಲ್ಲದೆ ಸಾಕ್ಷಿಗಳ ಮೇಲೂ ಪ್ರಭಾವ ಬೀರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಿಗೆ ಮಧ್ಯಂತರ ಜಾಮೀನು ನೀಡಿದರೆ ಅದನ್ನು ಮುಂದುವರಿಸುವ ಸಾಧ್ಯತೆಗಳಿವೆ ಎಂದು ಹೇಳಿದ್ದ ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.