ನವದೆಹಲಿ: ತಮ್ಮನ್ನು ದೀರ್ಘ ರಜೆಯ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ.
ಅಲೋಕ್ ಕುಮಾರ್ ವರ್ಮಾ ಮತ್ತು ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಅವರು ಪರಸ್ಪರ ಭ್ರಷ್ಟಾಚಾರದ ಆರೋಪ ಮಾಡಿಕೊಂಡ ಪ್ರಕರಣ ಬೀದಿಗೆ ಬರುತ್ತಿದ್ದಂತೆ ಇಬ್ಬರನ್ನೂ ಕೇಂದ್ರ ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿತ್ತು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ನೇತೃತ್ವದ ಪೀಠವು ವರ್ಮಾ, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಜಾಗೃತ ದಳದ (ಸಿವಿಸಿ) ವಾದ ಪ್ರತಿವಾದವನ್ನು ಕಳೆದ ಡಿಸೆಂಬರ್ 6ರಂದು ಆಲಿಸಿದ ನಂತರ, ತೀರ್ಪನ್ನು ಕಾಯ್ದಿರಿಸಿತ್ತು.
ರಾಕೇಶ್ ಅಸ್ತಾನ ಸೇರಿದಂತೆ ಸಿಬಿಐನ ಹಲವಾರು ಅಧಿಕಾರಿಗಳ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ಸುಪ್ರೀಂ ಕೋರ್ಟ್‌ನ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸರ್ಕಾರೇತರ ಸಂಸ್ಥೆ ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.