ADVERTISEMENT

ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜೂನ್ 2024, 10:20 IST
Last Updated 26 ಜೂನ್ 2024, 10:20 IST
<div class="paragraphs"><p>ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಲ್ಲಿ&nbsp; ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.</p></div>

ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

   

–ಎಕ್ಸ್‌ (ಟ್ವಿಟರ್‌) ಚಿತ್ರ

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಯನ್ನು ಅಲಂಕರಿಸಿದ್ದಾರೆ. ಇದರಿಂದ ಸಂತಸಗೊಂಡ ಬಿಜೆಪಿ ಕಾರ್ಯಕರ್ತರು ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ADVERTISEMENT

ಸ್ಪೀಕರ್‌ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. 17ನೇ ಲೋಕಸಭೆಯ ಸ್ಪೀಕರ್‌ ಆಗಿದ್ದ ಓಂ ಬಿರ್ಲಾ ಅವರನ್ನೇ ಎನ್‌ಡಿಎ ಮೈತ್ರಿಕೂಟ ಕಣಕ್ಕಿಳಿಸಿತ್ತು. ಸದನದ ಹಿರಿಯ ಸದಸ್ಯ ಕೋಡಿಕುನ್ನಿಲ್ ಸುರೇಶ್‌ ಅವರನ್ನು ‘ಇಂಡಿಯಾ’ ಮೈತ್ರಿಕೂಟ ಹುರಿಯಾಳಾಗಿ ಮಾಡಿತ್ತು. ಇಬ್ಬರೂ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು.

ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾವವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು.

ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್‌ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಧ್ವನಿ ಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ಲಭಿಸಿತು. ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನೂತನ ಸ್ಪೀಕರ್‌ ಅವರನ್ನು ಪೀಠಕ್ಕೆ ಕರೆತಂದರು.

ಓಂ ಬಿರ್ಲಾ ಅವರು ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಿಂದ ಮೂರನೇ ಅವಧಿಗೆ ಆಯ್ಕೆಯಾಗಿದ್ದಾರೆ. ಈ ಸಲ ಅವರು ಕಾಂಗ್ರೆಸ್‌ ಅಭ್ಯರ್ಥಿಯನ್ನು 41 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. 2019ರಲ್ಲಿ ಅಚ್ಚರಿ ಅಭ್ಯರ್ಥಿಯಾಗಿ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಓಂ ಬಿರ್ಲಾ ಅವರನ್ನು ಬಿಜೆಪಿ ಆಯ್ಕೆ ಮಾಡಿತ್ತು. ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.