ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಬೆನ್ನಲ್ಲೇ ಇಲ್ಲಿನ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಕಚೇರಿಯ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ಕುಣಿದು, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ‘ಜೈಲ್ ಕೆ ತಾಲೆ ಟೂಟ್ ಗಯೆ, ಕೇಜ್ರಿವಾಲ್ ಚೂಟ್ ಗಯೆ’ (ಜೈಲಿನ ಕಂಬಿಗಳು ಮುರಿದವು, ಕೇಜ್ರಿವಾಲ್ ಬಿಡುಗಡೆಯಾದರು) ಎಂದು ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು.
ಮಹತ್ವದ ಘಟನೆಯೊಂದರಲ್ಲಿ, ಲೋಕಸಭಾ ಚುನವಣಾ ಪ್ರಚಾರದಲ್ಲಿ ಭಾಗಿಯಾಗಲು ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಜೂನ್ 2ರಂದು ಜೈಲಿಗೆ ಶರಣಾಗಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ ಸೂಚಿಸಿದೆ.
ಕೊನೆಯ ಹಾಗೂ 7ನೇ ಹಂತದ ಮತದಾನ ಜೂನ್ 1ರಂದು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.